ಚಾಮರಾಜನಗರ: ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Update: 2018-05-28 12:07 GMT

ಚಾಮರಾಜನಗರ,ಮೇ.28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ರೈತರ ಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಕರೆ ನೀಡಿಲಾಗಿದ್ದ ಕರ್ನಾಟಕ ಬಂದ್ ಗೆ ಚಾಮರಾಜನಗರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಯಳಂದೂರು, ಹನೂರು, ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಎಂದಿನಂತೆ ಸರ್ಕಾರಿ ಬಸ್‍ಗಳು ಸಂಚಾರ ಮಾಡುತ್ತಿದ್ದು, ಖಾಸಗಿ ಬಸ್‍ಗಳು ಬಂದ್‍ಗೆ ಬೆಂಬಲ ನೀಡಲಿಲ್ಲ. ಬಹುತೇಕ ಹೋಟೆಲ್‍ಗಳು ರಾಜ್ಯ ಹೋಟೆಲ್ ಮಾಲಿಕರ ಸಂಘದ ಸೂಚನೆಯಂತೆ ಬಂದ್ ಆಗಿದ್ದವು, ಆಟೋಗಳು, ಪೆಟ್ರೋಲ್ ಬಂಕ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ಎಂದಿನಂತೆ ನಡೆದವು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳು ಬಂದ್‍ಗೆ ಬೆಂಬಲ ಸೂಚಿಸುವ ಸಲುವಾಗಿ ಪಟ್ಟಣದ ಅಂಗಡಿಗಳನ್ನು ಬಾಗಿಲು ಹಾಕಿಸಲು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದವು.

ಗುಂಡ್ಲುಪೇಟೆ ಬಿಜೆಪಿ ಕಚೇರಿಯಲ್ಲಿ ಶಾಸಕ ಸಿ.ಎಸ್. ನಿರಂಜನ್‍ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿದೆ. ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿರವರು ಚುನಾವಣೆ ಪೂರ್ವದಲ್ಲಿ ತಮ್ಮ ಪಕ್ಷದ ಪ್ರನಾಳಿಕೆಯಲ್ಲಿ ತಿಳಿಸುವಂತೆ ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ರೈತರ ಎಲ್ಲಾ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದರು. ಅವರು ಮುಖ್ಯಮಂತ್ರಿಯಾಗಿ ನಾಲ್ಕು ದಿನಗಳು ಕಳೆದರೂ ಸಾಲ ಮನ್ನಾ ಮಾಡಿಲ್ಲ ಎಂದು ಟೀಕಿಸಿದರು.

ಚಾಮರಾಜನಗರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಪಟ್ಟಣ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಕೊಳ್ಳೇಗಾಲ ಪಟ್ಟಣದಲ್ಲಿ ಜಿಪಿ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಬೈಕ್ ರ್ಯಾಲಿ ನಡೆಸಿ, ಆಸ್ಪತ್ರೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಸಿ ಪ್ರತಿಭಟನೆ ನಡೆಸಿದರು. ಯಳಂದೂರು ಮತ್ತು ಹನೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News