‘ಸಾಲಮನ್ನಾ’ಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ವಿಫಲ

Update: 2018-05-28 12:35 GMT

ಬೆಂಗಳೂರು, ಮೇ 28: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ಹೊರತುಪಡಿಸಿ ವಿವಿಧ ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ಬಂದ್ ಕರೆ ನೀಡಿದ್ದರೂ ವರ್ತಕರು, ಸಾರಿಗೆ ಸಂಸ್ಥೆಗಳು, ಆಟೋ-ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕರಿಂದ ಪೂರಕ ಬೆಂಬಲ ಸಿಗಲಿಲ್ಲ. ಹೀಗಾಗಿ ಬಿಜೆಪಿ ಬಂದ್ ಸಂಪೂರ್ಣ ವಿಫಲವಾಗಿದೆ.

ಬೀದರ್, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ಮೈಸೂರು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಸಕರು ಮತ್ತು ಸಂಸದರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಮುಖಂಡರನ್ನು ವಶಕ್ಕೆ ಪಡೆದರು.

ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ, ಬೀದರ್‌ನಲ್ಲಿ ಭಗವಂತ ಖೂಬಾ, ಕೊಪ್ಪಳದಲ್ಲಿ ಕರಡಿ ಸಂಗಣ್ಣ ಸೇರಿದಂತೆ ಸಂಸದರು ಮತ್ತು ಶಾಸಕರನ್ನು ಬಂಧಿಸಿದರು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ನಡೆಸಿದರು.

ಇಂದಿರಾ ಕ್ಯಾಂಟಿನ್‌ಗೆ ಕಲ್ಲು: ಚಿತ್ರದುರ್ಗ ನಗರದ ಯೂನಿಯನ್ ಪಾರ್ಕ್ ಬಳಿಯ ಇಂದಿರಾ ಕ್ಯಾಂಟೀನ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಕಿಟಕಿ ಗಾಜು ಪುಡಿ ಮಾಡಿದ್ದು, ಈ ಸಂಬಂಧ ನಗರದ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಗೊತ್ತಾಗಿದೆ.

ಹೊಟೇಲ್ ಬಂದ್‌ಗೆ ಬೆದರಿಕೆ: ಯಾದಗಿರಿಯಲ್ಲಿ ಬಿಜೆಪಿ ಶಾಸಕ ವೆಂಕಟ ಶಿವಾರೆಡ್ಡಿ ಹೊಟೇಲ್‌ವೊಂದಕ್ಕೆ ತೆರಳಿ ತಕ್ಷಣವೇ ಬಾಗಿಲು ಮುಚ್ಚುವಂತೆ ಆಗ್ರಹ ಪಡಿಸಿದರು. ಈ ಮಧ್ಯೆ ಗ್ರಾಹಕರು ಮತ್ತು ಶಾಸಕರ ನಡುವೆ ವಾಗ್ವಾದ ನಡೆದಿದ್ದು, ನಾನು ಈ ಕ್ಷೇತ್ರದ ಶಾಸಕ ನಾನು ಹೇಳಿದಂತೆ ನಡೆದುಕೊಳ್ಳಬೇಕೆಂದು ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.

ಡಿವೈಎಸ್ಪಿ ಮೇಲೆ ಹಲ್ಲೆ?: ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಹಿನ್ನೆಲೆಯಲ್ಲಿ ಆಟೋರಿಕ್ಷಾ ವಶಕ್ಕೆ ಪಡೆದ ಡಿವೈಎಸ್ಪಿ ಮೇಲೆ ಸಂಸದ ಕರಡಿ ಸಂಗಣ್ಣ ಹಲ್ಲೆ ನಡೆಸಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಪೊಲೀಸ್ ಠಾಣೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯಾದ್ಯಂತ ಶಾಲಾ-ಕಾಲೇಜು, ಸರಕಾರಿ ಕಚೇರಿಗಳು, ಬ್ಯಾಂಕುಗಳು, ಕಾರ್ಖಾನೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಲಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಬಿಜೆಪಿ ಕರೆ ನೀಡಿದ್ದ ಬಂದ್ ಬಿಸಿ ಕೊಂಚವೂ ತಟ್ಟಲಿಲ್ಲ

ಸಾಲಮನ್ನಾಕ್ಕೆ ವಾರದ ಗಡುವು:
‘ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಬಂದ್ ಯಶಸ್ವಿಯಾಗಿದೆ. ರೈತರ ಸಾಲಮನ್ನಾಕ್ಕೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರೆ, ಅವರ ವಿರುದ್ಧ ಪೊಲೀಸರನ್ನು ಬಿಟ್ಟು ದಬ್ಬಾಳಿಕೆ ಮಾಡಲಾಗುತ್ತಿದೆ. ಸಂಸದರು, ಶಾಸಕರ ವಿರುದ್ಧ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇನ್ನು ಒಂದು ವಾರದಲ್ಲಿ ಸರಕಾರ ರೈತರ ಸಾಲಮನ್ನಾ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು’
-ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News