×
Ad

ಸಪ್ತಾಹ ಮಾದರಿಯಲ್ಲಿ ಕಾರ್ಯಕ್ರಮ ಆಯೋಜಿಸಿ : ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ

Update: 2018-05-29 18:41 IST

ಮಡಿಕೇರಿ ಮೇ 29 : ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಹಂತದಲ್ಲಿ ‘ಪರಿಸರ ಜಾಗೃತಿ’ ಬಗ್ಗೆ ನಿರಂತರ ಕಾರ್ಯಕ್ರಮ ಆಯೋಜಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ.   

ವಿಶ್ವ ಪರಿಸರ ದಿನಾಚರಣೆ ಆಯೋಜನೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ ದಿನಾಚರಣೆ ಪ್ರಯುಕ್ತ ಶಾಲಾ-ಕಾಲೇಜಿಗಳಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಪರಿಸರ ದಿನಾಚರಣೆಯಂದು ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡುವಂತೆ ಪರಿಸರ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.  

ಜಿಲ್ಲಾ, ತಾಲ್ಲೂಕು ಮತ್ತು ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾಪಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಪ್ರವಾಸಿ ಕೇಂದ್ರಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಚೆಕ್ ಪೋಸ್ಟ್‍ಗಳಲ್ಲಿ ದೊಡ್ಡ ನಾಮಫಲಕ ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದರು. ಶಾಲಾ-ಕಾಲೇಜು, ಆಸ್ಪತ್ರೆ, ಕಚೇರಿಗಳು, ವೈದ್ಯಕೀಯ ಕಾಲೇಜು, ಚಿಕ್ಕಳುವಾರ ವಿಶ್ವ ವಿದ್ಯಾನಿಲಯ ಕೇಂದ್ರ, ರಾಜಾಸೀಟು,  ನ್ಯಾಯಾಲಯ ಆವರಣ ಹೀಗೆ ನಾನಾ ಕಡೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಬೇಕು. ಜೊತೆಗೆ ಕಚೇರಿ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಅರಣ್ಯ ಹಾಗೂ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈಜೋಡಿಸಿ ಪರಿಸರ ಸಪ್ತಾಹ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸಬಾರದು, ಗಣ್ಯ ಅತಿಥಿಗಳಿಗೆ ಪುಸ್ತಕ, ಗಿಡ ಅಥವಾ ಹೂವನ್ನು ಮಾತ್ರ ನೀಡಬೇಕು. ಆ ನಿಟ್ಟಿನಲ್ಲಿ ಬದಲಾವಣೆ ಕಾಣಬೇಕಿದೆ ಎಂದು ಪಿ.ಐ.ಶ್ರೀವಿದ್ಯಾ ಅವರು ಹೇಳಿದರು. ಜಿಲ್ಲೆಯಲ್ಲಿ ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಮದುವೆ ಹಾಗೂ ಇತರೆ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ನಿರ್ದೇಶನ ನೀಡಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜರುಗುವ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗ ಪ್ಲಾಸ್ಟಿಕ್ ಬಳಸದಂತೆ ಮಾಹಿತಿ ನೀಡಬೇಕು. ಆ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. 

ಪ್ಲಾಸ್ಟಿಕ್‍ನ್ನು ಒಂದೆಡೆ ಸಂಗ್ರಹಿಸಿ, ಬೇರೆಡೆಗೆ ಸಾಗಿಸಬೇಕು. ಅದನ್ನು ಬಿಟ್ಟು ಬೆಂಕಿಗೆ ಹಾಕಿ ಹೊಗೆ ಕುಡಿದರೆ ಕ್ಯಾನ್ಸರ್ ಬರುವುದು ಖಂಡಿತಾ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು. “ಯಾವುದೇ ಕ್ಷೇತ್ರದಲ್ಲಿ ಸಾಮಾಜಿಕ ಹೊಣೆಗಾರಿಕೆ ಪ್ರತಿಯೊಬ್ಬರಲ್ಲಿ ಇದ್ದಾಗ ಮಾತ್ರ ಬದಲಾವಣೆ ಕಾಣಲು ಸಾಧ್ಯ. ಜೊತೆಗೆ ಸಮಾಜದಲ್ಲಿನ ಎಲ್ಲರಲ್ಲಿಯೂ ಭಯವೂ ಸಹ ಇರಬೇಕು. ಇಲ್ಲದಿದ್ದಲ್ಲಿ ಬದಲಾವಣೆ ಅಸಾಧ್ಯ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಅರಿವು ಮೂಡಿಸಿ, ನಂತರ ಬಳಕೆ ಮಾಡುವುದು ಮುಂದುವರೆದಲ್ಲಿ ಶುಲ್ಕ ಪಾವತಿಸಲು ಸೂಚಿಸಿ ಎಂದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.”   

ಜಿಲ್ಲಾ ಪರಿಸರ ಅಧಿಕಾರಿ ಗಣೇಶನ್ ಅವರು ಪರಿಸರ ದಿನಾಚರಣೆ ಬಗ್ಗೆ ಮಾತನಾಡಿ ಪ್ರಸಕ್ತ ವರ್ಷ ಪರಿಸರ ದಿನಾಚರಣೆಯನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಜೂನ್ 1 ರಂದು ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಭೆ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದರು. 
‘ಕೊಡಗು ಜಿಲ್ಲೆಯ ನಡೆ ಪ್ಲಾಸ್ಟಿಕ್ ಇಲ್ಲದ ಕಡೆಗೆ’ ಆ ನಿಟ್ಟಿನಲ್ಲಿ ವಿಶ್ವ ಪರಿಸರ ದಿನಾಚರಣೆಯಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ರಾಜಸೀಟು ವರೆಗೆ ವಾಕಥಾನ್ ಮತ್ತು ಮ್ಯಾರಥಾನ್ ಏರ್ಪಡಿಸಲಾಗುವುದು ಎಂದು ಗಣೇಶನ್ ಅವರು ಮಾಹಿತಿ ನೀಡಿದರು. 

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರು ಸಾಮಾಜಿಕ ಅರಣ್ಯ ವಿಭಾಗದಲ್ಲಿ ಸುಮಾರು 13 ಲಕ್ಷ ಗಿಡಗಳು ಇದ್ದು, ಆಯಾಯ ವ್ಯಾಪ್ತಿಯಲ್ಲಿರುವ ನರ್ಸರಿಗಳಲ್ಲಿ ಸಸಿಗಳನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಿಸ್ತರಾಜ ಅವರು ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆ ತಡೆ ಸಂಬಂಧ ಹಲವು ಸಲಹೆ ನೀಡಿದರು. ಜಿ.ಪಂ.ಉಪ ಕಾರ್ಯದರ್ಶಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಬಾಲಕೃಷ್ಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಜಗನ್ನಾಥ್, ಪೌರಾಯುಕ್ತರಾದ ಬಿ.ಶುಭಾ, ನಗರಾಭಿವೃದ್ಧಿ ಕೋಶದ ಎಇಇ ಸ್ವಾಮಿ, ಪ.ಪಂ.ಮುಖ್ಯಾಧಿಕಾರಿಗಳಾದ ಶ್ರೀಧರ, ಹೇಮಕುಮಾರ್, ತಾ.ಪಂ.ಇಒಗಳಾದ ಚಿಟ್ಟಿಯಪ್ಪ, ಜಯಣ್ಣ, ಲಕ್ಷ್ಮಿ, ತೋಟಗಾರಿಕಾ ಇಲಾಖೆಯ ಚಂದ್ರಶೇಖರ, ಸ್ವಚ್ಚ ಭಾರತ್ ಅಭಿಯಾದ ಸಮಾಲೋಚಕರಾದ ಸೂರಜ್, ಪೆಮ್ಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಅಶಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಇತರರು ಪರಿಸರ ಜಾಗೃತಿ ಸಂಬಂಧ ಹಲವು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News