ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

Update: 2018-05-29 13:21 GMT

ಮೈಸೂರು,ಮೇ.29: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ವರಿಷ್ಠರು ಜವಾಬ್ದಾರಿ ನೀಡಿದರೆ ನಿಬಾಯಿಸುವೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಶಾಸಕರಾದ ನಂತರ ಇದೇ ಮೊದಲ ಬಾರಿಗೆ ಕ್ಷೇತ್ರದ ಜನರಿಗೆ ಕೃತಘ್ನತೆ ಸಲ್ಲಿಸಲು ಮಂಗಳವಾರ ಆಗಮಿಸಿದ ಯತೀಂದ್ರ ಹಾಗು ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು, ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅಧಿದೇವತೆ ತಾಯಿ ಶ್ರೀಚಾಮುಂಡೇಶ್ವರಿ ದೇವರಿಗೆ ಪೂಜೆ ಸಲ್ಲಿಸಿದರು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನನಗೆ ಸಚಿವ ಸ್ಥಾನ ನೀಡಿ ಎಂದು ಲಾಭಿ ಮಾಡಿಲ್ಲ, ಯಾರ ಬಳಿಯೂ ಹೋಗಿ ಒತ್ತಡ ತಂದಿಲ್ಲ, ನಾನು ಆಕಾಂಕ್ಷಿಯೂ ಅಲ್ಲ, ವರುಣಾ ಕ್ಷೇತ್ರದ ಜನ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರ ಸೇವೆ ಮಾಡಲು ಪ್ರಾಮಾಣಿಕವಾಗಿ ಕೆಲಸಮಾಡುತ್ತೇನೆ. ಪಕ್ಷದ ಹೈಕಮಾಂಡ್ ನಿರ್ಧರಿಸಿ ನನಗೆ ಸಚಿವ ಸ್ಥಾನ ನೀಡಿದರೆ ಸಂತೋಷವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದರು.

ನಂತರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ತೆರಳಿ ಸುತ್ತೂರು ಜಗದ್ಗುರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು. 

ಕಾಂಗ್ರೆಸ್ ಮುಖಂಡರಾದ ಮಾಜಿ ಜಿ.ಪಂ. ಅಧ್ಯಕ್ಷ ಬಿ.ಎಂ.ರಾಮು, ಗುರುಪಾದಸ್ವಾಮಿ, ಸಂತೃಪ್ತಿ ಕುಮಾರ್, ನಂದಕುಮಾರ್, ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಜೊತೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News