ವಾರಾಂತ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ
ಬೆಂಗಳೂರು, ಮೇ 29: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬರುವ ಲಕ್ಷಣಗಳು ಗೋಚರಿಸುತ್ತಿದ್ದು, ವಾರಾಂತ್ಯಕ್ಕೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಹೊಸದಿಲ್ಲಿಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಮಾತುಕತೆ ಫಲಪ್ರದವಾಗಿದೆ ಎನ್ನಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಸೋಮವಾರ ಕುಮಾರಸ್ವಾಮಿ ನಡೆಸಿದ ಮಾತುಕತೆಯಲ್ಲಿ ಉಭಯ ಪಕ್ಷಗಳ ಮುಖಂಡರು, ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಗ್ಗಂಟು ನಿವಾರಣೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ನೂತನ ಸಚಿವರು ವಾರಾಂತ್ಯಕ್ಕೆ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷಕ್ಕೆ ಹಣಕಾಸು, ಲೋಕೋಪಯೋಗಿ, ಕಂದಾಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಮುಜುರಾಯಿ, ಪಶುಸಂಗೋಪನೆ, ಕಾಂಗ್ರೆಸ್ ಪಕ್ಷಕ್ಕೆ ಗೃಹ, ಇಂಧನ, ನಗರಾಭಿವೃದ್ಧಿ, ಬೆಂಗಳೂರು ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಅಬಕಾರಿ, ಗಣಿ ಮತ್ತು ಭೂ ವಿಜ್ಞಾನ, ಉನ್ನತ ಶಿಕ್ಷಣ, ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲು ಉಭಯ ಪಕ್ಷಗಳ ಮುಖಂಡರು ಒಪ್ಪಿದ್ದಾರೆ ಎನ್ನಲಾಗಿದೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ನಾಲ್ಕು ದಿನಗಳಾದರೂ, ಸಂಪುಟ ವಿಸ್ತರಣೆ ಮಾಡದೆ, ಖಾತೆಗಳಿಗಾಗಿ ಹಗ್ಗ-ಜಗ್ಗಾಟ ನಡೆಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಮುಖಂಡರ ನಡೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗುತ್ತಿದೆ. ಅಲ್ಲದೆ, ವಿರೋಧ ಪಕ್ಷಗಳಿಗೆ ಸರಕಾರದ ವಿರುದ್ಧ ಮುಗಿಬೀಳಲು ಅಸ್ತ್ರ ನೀಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿಯವರೆಗೆ ಎರಡು ಪಕ್ಷಗಳ ನಾಯಕರು ಚರ್ಚೆ ನಡೆಸಿ ಖಾತೆ ಹಂಚಿಕೆ ವಿಚಾರದಲ್ಲಿ ಒಮ್ಮತಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಅಧಿನಾಯಕಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ವಿಡಿಯೋ ಕಾನ್ಫೆರೆನ್ಸ್ ಮೂಲಕ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಖಾತೆ ಹಂಚಿಕೆ ಪಟ್ಟಿಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದರ ಕುರಿತು ನಾಳೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಅಂತಿಮಗೊಳಿಸುವ ಸಾಧ್ಯತೆಯಿದೆ. ಪ್ರಾದೇಶಿಕ ಸಮಾನತೆ, ಜಾತಿವಾರು ಪ್ರಾತಿನಿಧ್ಯ, ಹಿರಿತನ ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸಿ, ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಉದ್ದೇಶಿಸಿದೆ.