ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರಲ್ಲಿ ಆಯನೂರು ಮನವಿ
ಮಂಗಳೂರು, ಮೇ 30: ನೈಋತ್ಯ ಪವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತನಗೆ ಮತವನ್ನು ಹಾಕುವ ಮೂಲಕ ಗೆಲ್ಲಿಸಬೇಕು ಎಂದು ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿರುವುದನ್ನು ಗಮನಿಸಿದ್ದೇನೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್ ಸರಿಯಾಗಿ ತುಟ್ಟಿ ಭತ್ಯೆಯನ್ನು ನೀಡದ ಕಾರಣ ಈ ಕ್ಷೇತ್ರದ ನೌಕರರು ಸಂಕಷ್ಟಕ್ಕೊಳಗಾಗಿದ್ದಾರೆ. ತಾನು ಆಯ್ಕೆಯಾಗಿ ಬಂದರೆ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇನೆ. ನೈಋತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿ, ಕಳೆದ ಅವಧಿಯಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದೇನೆ. ಈ ಬಾರಿಯೂ ಮತವನ್ನು ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿೃಜೇಶ್ ಚೌಟ, ಕೋಶಾಧಿಕಾರಿ ಸಂಜಯ ಪ್ರಭು, ವಕ್ತಾರ ಸತೀಶ್ ಪ್ರಭು, ಜಿತೇಂದ್ರ ಕೊಟ್ಟಾರಿ ಉಪಸ್ಥಿತರಿದ್ದರು.