ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-05-31 15:09 GMT

ಬೆಂಗಳೂರು, ಮೇ 31: ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಹಸ್ತಕ್ಷೇಪಗಳಿಗೆ ಮಣಿಯದೆ ನಿರ್ಭೀತಿಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಇಲಾಖೆಯ ಕಾರ್ಯದಲ್ಲಿ ತಾವು ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಇಂತಹ ಚಟುವಟಿಕೆಗಳನ್ನು ಮಟ್ಟಹಾಕಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾನೂನು ಸುವ್ಯವಸ್ಥೆ ಚರ್ಚೆ: ರಾಜ್ಯದ ಕಾನೂನಿನ ಸುವ್ಯವಸ್ಥೆ ಬಗ್ಗೆಯೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಎಚ್ಚರವಹಿಸಿ ಎಂದು ಸಲಹೆ ಮಾಡಿದ್ದಾರೆಂದು ಗೊತ್ತಾಗಿದೆ.

ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅವರ ಹಿತವನ್ನು ಗಮನದಲ್ಲಿಟ್ಟುಕೊಂಡು ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯಾವುದೇ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು, ರಾಜ್ಯದಲ್ಲಿ ಮಕ್ಕಳ ಅಪಹರಣ ಕುರಿತ ವದಂತಿಗಳ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಎಂ.ಎನ್.ರೆಡ್ಡಿ, ಹರಿಶೇಖರನ್ ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News