ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ

Update: 2018-05-31 17:44 GMT

ಮಡಿಕೇರಿ, ಮೇ.31: ನಾಪೋಕ್ಲು ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಗ್ರಾ.ಪಂ.ಪಿಡಿಒಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.  

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದರೂ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ. ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕವಾದರೂ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. 

ಪ್ರವಾಸಿ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ರಕ್ಷಕರನ್ನು ನಿಯೋಜಿಸಬೇಕು. ಜೊತೆಗೆ ಸಿಸಿ ಟಿವಿ ಅಳವಡಿಬೇಕು. ತಮ್ಮ ತಮ್ಮ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು.  

ತಮ್ಮ ತಮ್ಮ ಗ್ರಾ.ಪಂ.ವ್ಯಾಪ್ತಿಯ ಪ್ರವಾಸಿ ಕೇಂದ್ರಗಳಲ್ಲಿ ವಾಹನ ನಿಲುಗಡೆ ಶುಲ್ಕವನ್ನು ಸಂಗ್ರಹಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. 

ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಎನ್‍ಒಸಿ ನೀಡುವಾಗ ಪರಿಸರ ಸಂಬಂಧ ಷರತ್ತುಗಳನ್ನು ವಿಧಿಸಬೇಕು ಗ್ರಾಮಸಭೆ ಆಹ್ವಾನಿಸಿ ಪರಿಸರದ ಮಹತ್ವ ಬಗ್ಗೆ ಮನವರಿಕೆ ಮಾಡಬೇಕು. ಜಿಲ್ಲೆಯ ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪ್ರತಿ ವಾರ ಸ್ವಚ್ಚತಾ ದಿನ ಆಚರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಈಗಾಗಲೇ ಮುಂಗಾರು ಆರಂಭವಾಗಿದ್ದು, ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಪಿ.ಐ.ಶ್ರೀವಿದ್ಯಾ ಅವರು ಹೇಳಿದರು.  

ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಉಪ ಕಾರ್ಯದರ್ಶಿ ಬಾಬು, ತಾ.ಪಂ.ಇಒಗಳಾದ ಲಕ್ಷ್ಮಿ, ಚಟ್ಟಿಯಪ್ಪ, ಜಯಣ್ಣ, ಸ್ವಚ್ಚ ಭಾರತ್ ಅಭಿಯಾನದ ಸಮಾಲೋಚಕರಾದ ಸೂರಜ್, ಪೆಮ್ಮಯ್ಯ, ವಾಸುದೇವ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಇತರರು ಹಾಜರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News