ವಿದ್ಯಾರ್ಥಿಗಳ ದಾಖಲೆ ಪತ್ರಗಳನ್ನು ತಡೆ ಹಿಡಿದಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು
ಮಂಗಳೂರು, ಜೂ.1: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಅಧೀನದಲ್ಲಿರುವ ಜಿಲ್ಲೆಯ ಹಲವಾರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಮತ್ತು ವೈಯಕ್ತಿಕ ಕಾರಣಗಳಿಂದ ಕೋರ್ಸುಗಳನ್ನು ಮೊಟಕುಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೋಸ್ಕರ ಇತರ ಶಿಕ್ಷಣ ಸಂಸ್ಥೆಗೆ ಸೇರಲು ತೀರ್ಮಾನಿಸಿದ್ದರೂ ಕೂಡಾ ಕೆಲವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ವಿದ್ಯಾರ್ಥಿಗಳ ಮೂಲ ದಾಖಲೆ ಪತ್ರವನ್ನು ನೀಡದೆ ಸತಾಯಿಸುತ್ತಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ಸರಕಾರಿ ಆದೇಶ ಉಲ್ಲಂಘನೆ: ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯ ಆದೇಶದಂತೆ ವಿದ್ಯಾರ್ಥಿಗಳು ಶಿಕ್ಷಣವನ್ನು ಅನಾರೋಗ್ಯ ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೆ ಸೇರ್ಪಡೆಗೊಳ್ಳಲು ಬಯಸಿದರೆ ಅಥವಾ ಕಾರಣಾಂತರದಿಂದ ಶಿಕ್ಷಣ ಮೊಟಕುಗೊಳಿಸಿದರೆ ಅವರ ಮೂಲ ದಾಖಲೆ ಪತ್ರವನ್ನು ತಡೆಡಿಯುವಂತಿಲ್ಲ. ಒಂದು ವೇಳೆ ಇಂತಹ ಬೆಳವಣಿಗೆಗಳು ಕಂಡುಬಂದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತ್ತು.
ಆದರೆ ವಿದ್ಯಾಸಂಸ್ಥೆಗಳು ಇಲಾಖೆಯ ಆದೇಶವನ್ನು ಉಲ್ಲಂಘಿಸಿ ದಾಖಲೆ ಪತ್ರವನ್ನು ಕೇಳಲು ಹೋದ ವಿದ್ಯಾರ್ಥಿಗಳಿಗೆ ಸಂಪೂರ್ಣ 4 ವರ್ಷದ ಶುಲ್ಕವನ್ನು ಪಾವತಿಸಲು ಒತ್ತಡ ಹಾಕುತ್ತಿದ್ದಾರೆ. ಸಂಸ್ಥೆಗಳ ಈ ಒತ್ತಡದಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮುಂದಿನ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೋಗಲು ಅಸಾಧ್ಯವಾಗಿ ಅತಂತ್ರರಾಗಿದ್ದಾರೆ. ಈ ಬಗ್ಗೆ ಹಲವಾರು ದೂರುಗಳು ಜಿಲ್ಲಾಧಿಕಾರಿಯ ಮೂಲಕ ಸಂಬಂಧಪಟ್ಟವರಿಗೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದುದರಿಂದ ತಾಂತ್ರಿಕ ಶಿಕ್ಷಣ ಇಲಾಖೆಯು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇಂತಹ ವಿದ್ಯಾಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕೈಗೊಂಡು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿರುವ ಸಿಎಫ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಕಿರ್, ನ್ಯಾಯ ದೊರಕದಿದ್ದಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ರಾಜ್ಯಮಟ್ಟದಲ್ಲಿ ಹೋರಾಟ ಸಂಘಟಿಸಲಿದ್ದೇವೆ ಎಂದು ತಿಳಿಸಿದ್ದಾರೆ.