×
Ad

ಸಚಿವ ಸಂಪುಟ ಹಂಚಿಕೆಯಲ್ಲಿ ಗೊಂದಲವಿಲ್ಲ: ಡಿಸಿಎಂ ಪರಮೇಶ್ವರ್

Update: 2018-06-02 20:02 IST

ಬೆಂಗಳೂರು, ಜೂ.2: ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟ ಪಡಿಸಿದರು.

ಶನಿವಾರ ನಗರದ ನೂತನ ಆರ್ಚ್ ಬಿಷಪ್ ಪೀಟರ್ ಮಚಾದೋ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೈದ್ಧಾಂತಿಕವಾಗಿ ಎರಡು ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಂಪುಟದಲ್ಲಿ ಖಾಲಿ ಇರುವ ಎಲ್ಲ ಸ್ಥಾನಗಳನ್ನು ಭರ್ತಿ ಮಾಡದೆ ಕೆಲವು ಸ್ಥಾನಗಳನ್ನು ಉಳಿಸಿಕೊಳ್ಳಲಾಗುತ್ತದೆ. ಕಾಂಗ್ರೆಸ್ ಪಾಲಿಗೆ ಬಂದಿರುವ 22 ಸ್ಥಾನಗಳಲ್ಲಿ ಪಕ್ಷೇತರರಿಗೂ ಅವಕಾಶ ಕಲ್ಪಿಸುವ ಕುರಿತು ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

ಬೆದರಿಕೆ ಖಂಡನೀಯ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮೇಲಿನ ಸಿಬಿಐ ದಾಳಿ ರಾಜಕೀಯ ದ್ವೇಷವಾಗಿದೆ. ಅಲ್ಲದೆ, ಇವರ ಬೆಂಬಲಿಗರ ಮೇಲೆ ದಾಳಿ ನಡೆಸುವ ವೇಳೆ ಡಿ.ಕೆ.ಸುರೇಶ್ ಹೆಸರು ಹೇಳುವಂತೆ ಒತ್ತಾಯಿಸುತ್ತಿರುವುದು ಖಂಡನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಮರ್ಥ ನಾಯಕರಿದ್ದಾರೆ: ಪಕ್ಷದಲ್ಲಿ ನನಗಿಂತಲೂ ಸಮರ್ಥವಾಗಿ ಕೆಲಸ ಮಾಡುವವರಿದ್ದಾರೆ. ಸದ್ಯದಲ್ಲೇ ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಿಸಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಆನಂತರ ನಾನು ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು.

ಮಹಾ ಧರ್ಮಾಧ್ಯಕ್ಷರಾಗಿ ನೂತನವಾಗಿ ನೇಮಕವಾಗಿರುವ ಆರ್ಚ್ ಬಿಷಪ್ ಪೀಟರ್ ಮಚಾದೋ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಪೀಟರ್ ಮಚಾದೋ ಅವರು ಸಂಸ್ಥೆಯನ್ನು ಇನ್ನಷ್ಟು ಸದೃಢವಾಗಿ ಕಟ್ಟಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News