×
Ad

ಸೋತ ಕ್ಷೇತ್ರಗಳ ಕುರಿತು ಪರಾಮರ್ಶೆ ಅಗತ್ಯ: ಡಾ.ಜಿ.ಪರಮೇಶ್ವರ್

Update: 2018-06-02 21:21 IST

ಬೆಂಗಳೂರು, ಜೂ.2: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯದ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು, ಮುಂಬರುವ ಲೋಕಸಭೆ ಚುನಾವಣೆಗೆ ಸಜ್ಜಾಗಬೇಕೆಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕರೆ ನೀಡಿದ್ದಾರೆ.

ಶನಿವಾರ ನಗರದ ಸರ್ದಾರ್ ಪಟೇಲ್ ಭವನದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ‘ಕಾಂಗ್ರೆಸ್ ಸೋಲಿನ ಪರಾಮರ್ಶೆ ಮತ್ತು ಆತ್ಮಾವಲೋಕನ ಸಭೆ’ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೋಲು ಕಂಡಿರುವ ಕ್ಷೇತ್ರಗಳ ಕುರಿತು ಪರಾಮರ್ಶಿಸಿಕೊಳ್ಳುವ ಅಗತ್ಯವಿದೆ. ಸೋಲಿಗೆ ಕಾರಣವಾಗಿದ್ದ ಅಂಶಗಳ ಕುರಿತು ಪಕ್ಷದ ಜಿಲ್ಲಾಧ್ಯಕ್ಷರು ವರದಿ ಕೊಡಬೇಕೆಂದು ಸೂಚಿಸಿದರು.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದರಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಯಾವುದೇ ಹಿನ್ನೆಡೆಯಾಗುವುದಿಲ್ಲ. ಅಲ್ಲದೇ, ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ಯಾರಿಗೂ ಅಸಮಾಧಾನವಾಗದಂತೆ ನೋಡಿಕೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳು ಸೋತ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ನೀಡುವುದರ ಜೊತೆಗೆ ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರೆ ಅದಕ್ಕೆ ಸ್ಪಂದಿಸಲು ಹೈಕಮಾಂಡ್ ಸಿದ್ಧವಾಗಿದೆ. ಆ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಜಯಿಸಲು ಸಾಧ್ಯವಾಗುತ್ತದೆ ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಆರ್.ರೋಷನ್‌ಬೇಗ್, ಸಾಂಗ್ಲಿಯಾನ, ರಾಣಿ ಸತೀಶ್, ಮೊಟಮ್ಮ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News