ಮಳೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಹಾರ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು, ಜೂ.2: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶದ ಮೇರೆಗೆ ಮಳೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಹಾರ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ತಕ್ಷಣ ತೆರಳಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡು ಸಂತ್ರಸ್ತ ಪೀಡಿತರಿಗೆ ನೆರವು ಒದಗಿಸಬೇಕೆಂದು ಅವರು ಹೇಳಿದ್ದಾರೆ. ರಾಜ್ಯದ ಚಿಕ್ಕಮಗಳೂರು, ಧಾರವಾಡ, ಗದಗ, ಶಿವಮೊಗ್ಗ, ಬೆಳಗಾವಿ, ಚಾಮರಾಜ ನಗರ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಿಂದ ಹಾನಿ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮಗಳ ಕುರಿತು ಸೋಮವಾರದ ಒಳಗಾಗಿ ವರದಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು 24X7 ಕಟ್ಟೆಚ್ಚರ ವಹಿಸಿ, ಪ್ರತಿ ಕ್ಷಣದ ಮಾಹಿತಿಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ನೀಡುತ್ತಿರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿಗಳು ಇಂದು ಮುಖ್ಯಕಾರ್ಯದರ್ಶಿಗಳ ಜೊತೆ ಮಳೆ ಹಾನಿ ಮತ್ತು ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಮಾಹಿತಿ ನೀಡಿದ ಮುಖ್ಯಕಾರ್ಯದರ್ಶಿಗಳು ಮಳೆ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ, ಪರಿಹಾರ ಕ್ರಮಕ್ಕೆ ಅಗತ್ಯವಾದ ಹಣವನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದ್ದು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.