ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಮಲ್ಲಿಕಾರ್ಜುನ ಖರ್ಗೆ
Update: 2018-06-03 17:17 IST
ಬೆಂಗಳೂರು, ಜೂ. 3: ಎಚ್.ಡಿ.ಕುಮಾರಸ್ವಾಮಿಯವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿ ಎಂದು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. ಅದನ್ನು ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಿಸಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಒಂದು ತಂಡವಾಗಿ ಹೈಕಮಾಂಡ್ ಕೈಗೊಂಡ ತೀರ್ಮಾನವನ್ನು ಒಪ್ಪಿಕೊಂಡಿದ್ದೇವೆ. ಆದರೆ, ಈ ವಿಚಾರದಲ್ಲಿ ನನ್ನನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ದೂರಿದರು.
ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾನೂ ಯಾವುದೇ ಚರ್ಚೆ ಮಾಡಿಲ್ಲ. ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೂ ಮಾತನಾಡಿಲ್ಲ. ಪಕ್ಷದ ಸಭೆಗೂ ನಾನು ಹೋಗಲಿಲ್ಲ. ಆದರೂ ಸುಮ್ಮನೆ ನನ್ನ ಹೆಸರು ಎಳೆದು ತಂದಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.