×
Ad

ಮಡಿಕೇರಿ: ಪ್ರವಾಹ ಮುನ್ನೆಚ್ಚರಿಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕಲ್ಪನಾ ಸೂಚನೆ

Update: 2018-06-03 23:09 IST

ಮಡಿಕೇರಿ, ಜೂ.3: ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ನಾನಾ ಇಲಾಖೆ ಅಧಿಕಾರಿಗಳಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕಲ್ಪನಾ ಅವರು ಮಾಹಿತಿ ಪಡೆದರು.     

ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದರು.     
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳಬೇಕು. ಕಳೆದ ವಾರ ಬಿದ್ದ ಮಳೆಯಿಂದ ಜಾನುವಾರು ಪ್ರಾಣ ಹಾನಿ, ವಾಸದ ಮನೆ ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕಲ್ಪನಾ ಅವರು ಸೂಚನೆ ನೀಡಿದರು.  

ವ್ಯಾಪಕ ಮಳೆ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಿಫಾ ವೈರಸ್ ಹರಡದಂತೆ ಜಾಗೃತಿ ಮೂಡಿಸಬೇಕು. ಈ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿ.ಕಲ್ಪನಾ ಅವರು ಸಲಹೆ ಮಾಡಿದರು. 

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ, ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕೇಳಿಬರುತ್ತದೆ. ಆದ್ದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಪ್ರವಾಹ ಮುನ್ನೆಚ್ಚರಿಕೆ ಸಂಬಂಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಕಂದಾಯ ಇಲಾಖೆ ಸೇರಿದಂತೆ ಲೋಕೋಪಯೋಗಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಅರಣ್ಯ, ಪೊಲೀಸ್, ಗೃಹ ರಕ್ಷಕ ದಳ ಹೀಗೆ ನಾನಾ ಇಲಾಖೆಗಳು ಪ್ರವಾಹ ಮುನ್ನಚ್ಚರಿಕೆ ಎದುರಿಸಲು ಅಗತ್ಯ ತಯಾರಿ ಮಾಡಿಕೊಂಡಿವೆ ಎಂದರು.  

ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗುತ್ತಿದೆ. ಮುಂಗಾರು ಬಿತ್ತನೆ ಜೊತೆಗೆ ಇತರೆ ಇಳುವರಿಗೆ ಬೇಕಿರುವ ರಸಗೊಬ್ಬರವನ್ನು ಈಗಾಗಲೇ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು. 

ಈ ಬಾರಿ ಸಕಾಲದಲ್ಲಿ ಮಳೆ ಬಂದಿರುವುದರಿಂದ, ಜೊತೆಗೆ ಸಾಧಾರಣ ಮಳೆಯಾಗುತ್ತಿರುವುದರಿಂದ ಬೆಳೆಗಳಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾಹಿತಿ ನೀಡಿದರು. ಪ್ರವಾಹ, ನೆರೆಯಿಂದ ಉಂಟಾಗುವ ಬಾಧಿತ ಪ್ರದೆಶಗಳಲ್ಲಿ ಸಂಪರ್ಕ ವ್ಯವಸ್ಥೆಗಾಗಿ ದೋಣಿ/ಬೋಟ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅತಿ ಮಳೆ, ಗಾಳಿಯಿಂದ ಮರ ಉರುಳಿ ಬಿದ್ದಲ್ಲಿ, ಭೂಕುಸಿತ ಉಂಟಾದಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. 'ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಅತಿವೃಷ್ಠಿಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ 08272-221077ಕ್ಕೆ ತೆರೆಯಲಾಗಿದೆ. ಹಾಗೆಯೇ ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣಿ 1912 ಗೆ ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.   

ಪ್ರವಾಹ ಉಂಟಾಗಬಹುದಾದ ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.    
ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ, ಹೋಂ ಗಾರ್ಡ್‍ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತಹಶೀಲ್ದಾರರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.    

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು, ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಲಾಗಿದೆ. ಈ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಿಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳಲಾಗಿದೆ. ಹಾಗೆಯೇ ನಿಫಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು, ತಹಶೀಲ್ದಾರರಾದ ಶಾರದಾಂಬ, ಗೋವಿಂದರಾಜು, ಬಾಡ್ಕರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ, ಎಇಇ ಗಳಾದ ಇಬ್ರಾಹಿಂ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಾದ ಹೇಮಕುಮಾರ್, ಮತ್ತಿತರರು ಪ್ರವಾಹ ಮುನ್ನೆಚ್ಚರಿಕೆ ನಿಭಾಯಿಸುವ ಸಂಬಂಧ ಹಲವು ಮಾಹಿತಿ ನೀಡಿದರು.  

ಮನೆ ಹಾನಿ ಪ್ರದೇಶಕ್ಕೆ ಉಸ್ತುವಾರಿ ಕಾರ್ಯದರ್ಶಿ ಭೇಟಿ: ಸಭೆಗೂ ಮೊದಲು ಕತ್ತಲೆಕಾಡು ಗ್ರಾಮದಲ್ಲಿ ಮಳೆಯಿಂದ ಹಾನಿಯಾಗಿರುವ ವಾಸದ ಮನೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಪರಿಶೀಲನೆ ಮಾಡಿದರು. ಈ ಸಂಬಂಧ ಕೂಡಲೇ ವರದಿ ಕಳುಹಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಳೆದ ವಾರ ಮಳೆಯಿಂದ ಹಾನಿಯಾದ ಬಗ್ಗೆ ಕೂಡಲೇ ವರದಿ ಕಳಹಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ತಹಶೀಲ್ದಾರರಾದ ಶಾರದಾಂಭ ಇತರರು ಹಾಜರಿದ್ದರು.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News