ಪದವೀಧರ, ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ: ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು, ಜೂ.4: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಬಗ್ಗೆ ವಿಶೇಷ ಸಭೆ ನಡೆಯಿತು.
ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಗೆಲುವಿಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯಿತು.
ಕಳೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಐದನ್ನು ಬಿಜೆಪಿ ಹಾಗೂ ಒಂದನ್ನು ಜೆಡಿಎಸ್ ಗೆದ್ದುಕೊಂಡಿತ್ತು. ಆದರೆ ನಂತರ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ವೈ. ನಾರಾಯಣಸ್ವಾಮಿ ಅವರಿಂದ ತೆರವಾಗಿದ್ದ ಸ್ಥಾನವನ್ನು ಜೆಡಿಎಸ್‌ನ ರಮೇಶ್ ಬಾಬು ಗೆದ್ದುಕೊಂಡಿದ್ದರು.
ಈ ಸಾರಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಕೆಲ ಸ್ಥಾನ ಗೆದ್ದು ಪ್ರಾಬಲ್ಯ ಸಾಧಿಸಲು ಮುಂದಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಜತೆ ಕೈಜೋಡಿಸದೆ ಪ್ರತ್ಯೇಕ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧರಿಸಿದೆ.
ಜೂನ್ 21ಕ್ಕೆ ತೆರವಾಗಲಿರುವ ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 22 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಜೂನ್ 8ರಂದು ಮತದಾನ ನಡೆಯಲಿದೆ. ಇನ್ನು ಜೂನ್ 12ರಂದು ಮತ ಎಣಿಕೆ ನಡೆಯಲಿದೆ.
ಈ ಸಭೆಯಲ್ಲಿ ಡಾ.ಜಿ.ಪರಮೇಶ್ವರ್, ಶಾಸಕರಾದ ಎಸ್.ಟಿ.ಸೋಮಶೇಖರ್, ಮುನಿರತ್ನ, ಮೇಯರ್ ಸಂಪತ್‌ರಾಜ್, ಜಿಲ್ಲಾಧ್ಯಕ್ಷ ಎಂ.ರಾಜ್‌ಕುಮಾರ್, ವಿಧಾನ ಪರಿಷತ್ ಸದಸ್ಯರಾದ ನಾರಾಯಣಸ್ವಾಮಿ, ಗೋವಿಂದರಾಜ್, ಅಭ್ಯರ್ಥಿಗಳಾದ ರಾಮೋಜಿಗೌಡ, ಪ್ರೊ.ಚಂದ್ರಶೇಖರ್, ವೀರಣ್ಣ ಮತ್ತಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.