ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಕಾಂಗ್ರೆಸ್ ನಾಯಕರ ಯತ್ನ

Update: 2018-06-05 14:39 GMT

ಬೆಂಗಳೂರು, ಜೂ.5: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ತಮ್ಮ ಮಕ್ಕಳಿಗೆ ಸಚಿವ ಸ್ಥಾನಕೊಡಿಸಲು ಹಿರಿಯ ಕಾಂಗ್ರೆಸ್ ನಾಯಕರು, ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಕೆ.ಎಚ್.ಮುನಿಯಪ್ಪ ತಮ್ಮ ಪುತ್ರಿ ರೂಪಾ ಶಶಿಧರ್, ಸಂಸದ ಪ್ರಕಾಶ್ ಹುಕ್ಕೇರಿ ತಮ್ಮ ಪುತ್ರ ಗಣೇಶ್ ಹುಕ್ಕೇರಿ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆಗೆ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ಕಲ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಡಾ.ಯತೀಂದ್ರಗೆ ಸಚಿವ ಸ್ಥಾನ ಕೊಡುವಂತೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಝಾದ್ ಬಳಿ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್‌ಗೆ ಸಚಿವ ಸ್ಥಾನ ಸಿಕ್ಕಿದರೆ ಜೆಡಿಎಸ್ ಪ್ರಬಲವಾಗಲಿದೆ. ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಮಗನಿಗೆ ಸಚಿವ ಸ್ಥಾನ ಕಲ್ಪಿಸುವುದು ಅಗತ್ಯ ಎಂದು ಸಿದ್ದರಾಮಯ್ಯ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ, ಮಗನಿಗೆ ಸಚಿವ ಸ್ಥಾನ ಕೊಡುವುದು ಬಿಡುವುದು ನಿಮ್ಮ ವಿವೇಚನೆಗೆ ಬಿಟ್ಟದ್ದು ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ದಲಿತ ಎಡಗೈ ಸಮುದಾಯ ಹಾಗೂ ಮಹಿಳಾ ಕೋಟಾದಡಿಯಲ್ಲಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ತಮ್ಮ ಪುತ್ರಿ ರೂಪಾ ಶಶಿಧರ್‌ಗೆ ಸಚಿವ ಸ್ಥಾನ ಕೊಡುವಂತೆ ಕೆ.ಎಚ್.ಮುನಿಯಪ್ಪ ತೀವ್ರ ಲಾಬಿ ನಡೆಸುತ್ತಿದ್ದಾರೆ. ಐಟಿ-ಬಿಟಿ ಹಾಗೂ ಪ್ರವಾಸೋದ್ಯಮ ಸಚಿವರಾಗಿ ಉತ್ತಮ ಕೆಲಸ ಮಾಡಿರುವ ಪ್ರಿಯಾಂಕ್ ಖರ್ಗೆಗೆ ಎರಡನೆ ಬಾರಿ ಅವಕಾಶ ಕಲ್ಪಿಸಿಕೊಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಮಾಡಿರುವ ಮನವಿಗೆ, ಐಟಿ-ಬಿಟಿ ವಲಯದ ಪ್ರಮುಖರು ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲಿಂಗಾಯತ ಹಾಗೂ ಯುವಕರ ಕೋಟಾದಡಿಯಲ್ಲಿ ಎರಡನೆ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗಣೇಶ್ ಹುಕ್ಕೇರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಂಸದ ಪ್ರಕಾಶ್ ಹುಕ್ಕೇರಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News