ಸಚಿವ ಸ್ಥಾನ ಕೈ ತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್

Update: 2018-06-06 12:51 GMT

ಬೆಂಗಳೂರು, ಜೂ.6: ಸಚಿವ ಸ್ಥಾನ ಯಾವ ಕಾರಣಕ್ಕೆ ಕೈ ತಪ್ಪಿದೆ ಎಂಬುದು ಗೊತ್ತಿಲ್ಲ. ಈ ಸರಕಾರದಲ್ಲಿ ಇನ್ನು ಮುಂದೆ ಯಾವುದೇ ಖಾತೆ, ಹುದ್ದೆಯನ್ನು ಪಡೆಯುವುದಿಲ್ಲ. ಅವರಾಗಿಯೇ ನೀಡಿದರೂ ಸ್ವೀಕರಿಸುವುದಿಲ್ಲ ಎಂದು ಶಾಸಕ ಎಂ.ಬಿ.ಪಾಟೀಲ್ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಕ್ಷಣದವರೆಗೂ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಅಂತಿಮವಾಗಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ವೇಣುಗೋಪಾಲ್ ಮಾತ್ರ ಇದ್ದರು. ಅಲ್ಲಿ ಏನಾಗಿದೆ ಎಂಬುದು ಗೊತ್ತಿಲ್ಲ ಎಂದರು.

ಈ ಸರಕಾರದಲ್ಲಿ ನನಗೆ ಸಚಿವ ಸ್ಥಾನ, ಉಪ ಮುಖ್ಯಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಜವಾಬ್ದಾರಿಯನ್ನು ಪಡೆಯದೆ, ಶಾಸಕನಾಗಿ ನನ್ನ ಮತ ಕ್ಷೇತ್ರದ ಜನರ ಸೇವೆಯನ್ನು ಮಾಡುತ್ತೇನೆ. ಇಂದು ಅಥವಾ ನಾಳೆ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಬಿಜೆಪಿಯವರಿಂದ ನನಗೆ ಯಾವುದೇ ದೂರವಾಣಿ ಕರೆ ಬಂದಿಲ್ಲ. ಮುಂದಿನ ದಿನಗಳಲ್ಲಿ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಅವರು ತಿಳಿಸಿದರು. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಂ.ಬಿ.ಪಾಟೀಲ್ ನಿವಾಸದ ಎದುರು ಬೆಂಬಲಿಗರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದು ವರದಿಯಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟ ಗ್ರಾಮ ಪಂಚಾಯತ್ ನ 26 ಸದಸ್ಯರು, ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಸವೇಶ್ವರ ವೃತ್ತದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News