ಸರಕಾರಿ ಶಾಲೆಗಳಲ್ಲಿನ ದಾಖಲಾತಿ ಹೊಣೆ ಶಿಕ್ಷಕರ ಹೆಗಲಿಗೆ

Update: 2018-06-06 15:02 GMT

ಬೆಂಗಳೂರು, ಜೂ.6: ಸರಕಾರಿ ಶಾಲೆಗಳಲ್ಲಿ ದಾಖಲಾತಿಗಳನ್ನು ಹೆಚ್ಚಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ರೂಪಿಸಿದ್ದು, ಅದರ ಪ್ರಕಾರ ಮಕ್ಕಳನ್ನು ಶಾಲೆಗೆ ಕರೆತರುವ ಹೊಣೆಯನ್ನು ಶಿಕ್ಷಕರಿಗೆ ವಹಿಸಲಾಗಿದೆ.

ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿಯಿದ್ದರೆ, ಅದಕ್ಕೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರೇ ಜವಾಬ್ದಾರರು ಎಂದಿರುವ ಇಲಾಖೆ, ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರದ ಮೂಲಕ ನಿರ್ದೇಶನ ನೀಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿ ಇರುವ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೇ ಮಕ್ಕಳನ್ನು ದಾಖಲಿಸಲು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸಕ್ತ ಸಾಲಿನಲ್ಲಿ 261 ಪ್ರಾಥಮಿಕ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ. ಇಲ್ಲಿ ಒಟ್ಟು 229 ಶಿಕ್ಷಕರು ಕೆಲಸ ಮಾಡುತ್ತಿದ್ದು, ಪಾಠವೇ ಮಾಡದೇ ವೇತನ ಪಡೆಯುತ್ತಿದ್ದಾರೆ. ಇದೇ ರೀತಿ 57 ಪ್ರೌಢ ಶಾಲೆಗಳಲ್ಲಿ 137 ಶಿಕ್ಷಕರು ಕೆಲಸವೇ ಮಾಡದೆ ವೇತನ ಪಡೆಯುತ್ತಿದ್ದಾರೆ. 50 ಮಕ್ಕಳಿಗಿಂತ ಕಡಿಮೆ ದಾಖಲಾತಿ ಇದ್ದರೆ, ಅದನ್ನು ಹೆಚ್ಚುವರಿ ಜವಾಬ್ದಾರಿ ಮುಖ್ಯಶಿಕ್ಷಕರು ಮತ್ತು ಶಿಕ್ಷಕರದ್ದಾಗಿರುತ್ತದೆ. ಶೂನ್ಯ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳು 25 ಹಾಗೂ ಪ್ರೌಢ ಶಾಲಾ ಶಿಕ್ಷಕರು 50 ಮಕ್ಕಳನ್ನು ಶಾಲೆಗೆ ಸೇರಿಸಿದಿದ್ದರೆ, ಸಿಇಒ ಅಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗೆ ಮರು ನಿಯೋಜನೆ ಮಾಡಬೇಕು ಎಂದು ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News