ಬಂಜಾರರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Update: 2018-06-07 16:17 GMT

ಬೆಂಗಳೂರು, ಜೂ.7: ನೂತನ ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡದೆ ವಂಚಿಸಲಾಗಿದೆ ಎಂದು ಅಖಿಲ ಭಾರತ ಬಂಜಾರ ಸೇವಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇವಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ್ ಚೌಹಾಣ್, ಸಮ್ಮಿಶ್ರ ಸರಕಾರದ ನೂತನ ಸಚಿವ ಸಂಪುಟದಲ್ಲಿ ನಮ್ಮ ಸಮುದಾಯಕ್ಕಿಂತಲೂ ಕಡಿಮೆ ಜನಸಂಖ್ಯೆಯಿರುವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿರುವ ನಮ್ಮ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಡ್ಡಗಾಡು ಪ್ರದೇಶದಲ್ಲಿರುವ ಬಂಜಾರ ಸಮುದಾಯವು ಇಂದಿಗೂ ವಲಸೆ ಹೋಗುತ್ತಿದ್ದಾರೆ. ಅಲ್ಲದೆ, ಹಲವಾರು ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಮ್ಮ ಸಮುದಾಯದ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸ್ಪಂದಿಸುವ ಸಲುವಾಗಿ ಸಚಿವ ಸಂಪುಟದಲ್ಲಿ ನಮ್ಮ ಪ್ರತಿನಿಧಿ ಇರಬೇಕಿತ್ತು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದೆ ವಂಚಿಸಿವೆ ಎಂದು ದೂರಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಮ್ಮ ಸಮುದಾಯದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಆ ಮೂಲಕ ನಮ್ಮ ಸಮುದಾಯದ ಪರವಾಗಿ ನಿಲ್ಲಬೇಕು ಎಂದು ಅವರು ಮನವಿ ಮಾಡಿದರು.

ಜೂ.14 ಕ್ಕೆ ಧರಣಿ: ಬಂಜಾರ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದ್ದನ್ನು ಖಂಡಿಸಿ ಜೂ.14 ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಧರಣಿ ನಡೆಸಲು ನಿರ್ಣಯಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಹಾಗೂ ಸಚಿವರ ಮನೆಗೆ ಘೇರಾವ್ ಹಾಕಲಾಗುತ್ತದೆ ಎಂದು ಅವರು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News