ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಯತ್ನ

Update: 2018-06-08 14:46 GMT

ಬೆಂಗಳೂರು, ಜೂ.8: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೆ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಖಾಲಿಯಿರುವ 6 ಸಚಿವ ಸ್ಥಾನಗಳನ್ನು 10 ದಿನಗಳಲ್ಲಿ ಭರ್ತಿ ಮಾಡಲು ಮುಂದಾಗಿದೆ ಎನ್ನಲಾಗಿದೆ.

ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ಮಾಹಿತಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿಗೆ ಸೂಚನೆ ನೀಡಿದೆ. ಆ ಮೂಲಕ ಭಿನ್ನಮತೀಯರನ್ನು ಕಟ್ಟಿ ಹಾಕಲು ಪ್ರಯತ್ನಗಳು ನಡೆಸಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಕುರಿತು ಹೊಸದಿಲ್ಲಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಚರ್ಚೆ ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಮಧ್ಯಪ್ರವೇಶಿಸುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗುತ್ತಿದೆ. ಭಿನ್ನಮತೀಯ ಚಟುವಟಿಕೆ ನಡೆಸುವವರಿಗೆ ಯಾವುದೇ ಕಾರಣಕ್ಕೂ ಸಂಪುಟದಲ್ಲಿ ಸ್ಥಾನ ಕಲ್ಪಿಸದಿರಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ಸಚಿವ ಸ್ಥಾನ ವಂಚಿತರಾಗಿರುವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜೊತೆ ಚರ್ಚೆ ನಡೆಸಿದ್ದು, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಜೊತೆ ಹೊಸದಿಲ್ಲಿಗೆ ಬರುವಂತೆ ಕರೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News