ಮೈಸೂರು: ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಧರಣಿ
Update: 2018-06-08 20:42 IST
ಮೈಸೂರು,ಜೂ.8: ಶಾಸಕ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಧರಣಿ ನಡೆಸಲಾಯಿತು.
ಪುರಭವನದ ಆವರಣದಲ್ಲಿರುವ. ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ರಾಜ್ಯ ಸಮ್ಮಿಶ್ರ ಸರ್ಕಾರವು ಸತೀಶ್ ಜಾರಕಿ ಹೊಳಿಯವರಿಗೆ ಸಚಿವ ಸ್ಥಾನ ನೀಡದೆ ನಾಯಕ ಮತ್ತು ದಲಿತರನ್ನು ಅವಮಾನಿಸುತ್ತಿದೆ ಎಂದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೂಡಲೇ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಸಚಿವ ಸ್ಥಾನ ನೀಡದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದರು.
ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್, ರಾಜಣ್ಣ, ಸುರೇಶ್, ಪುಟ್ಟಸ್ವಾಮಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.