ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ರಿಂದ ಸ್ವಯಂ ಪ್ರೇರಿತ ಪಿಐಎಲ್ ದಾಖಲು

Update: 2018-06-08 16:10 GMT

ಬೆಂಗಳೂರು, ಜೂ.8: ಕಾರಾಗೃಹಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳನ್ನು ತುಂಬಿರುವ ಮತ್ತು ಸಾಕಷ್ಟು ಹುದ್ದೆ ಖಾಲಿಯಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಕಾರಾಗೃಹದಲ್ಲಿ ಹೆಚ್ಚಿನ ಕೈದಿಗಳನ್ನು ಕೂಡಿಹಾಕುವುದನ್ನು ತಡೆಯಲು ಮತ್ತು ಖಾಲಿಯಿರುವ ಹುದ್ದೆಗಳ ನೇಮಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ಗಳು ಅಗತ್ಯ ನಿರ್ದೇಶನ ನೀಡಬೇಕು ಎಂದು 2018ರ ಮೇ 8ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದರಿಂದ ರಿಜಿಸ್ಟ್ರಾರ್ ಜನರಲ್, ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.

ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾರಾಗೃಹಗಳ ಡಿಜಿಪಿ, ನಗರ ಪೊಲೀಸ್ ಆಯುಕ್ತರು, ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ

ಜೈಲುಗಳಲ್ಲಿ ಮಿತಿ ಮೀರಿ ಕೈದಿಗಳನ್ನು ತುಂಬುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಕೆಲ ಕಾರಾಗೃಹಗಳಲ್ಲಿ ಸಾಮರ್ಥ್ಯಕ್ಕಿಂತ ಶೇ.100ರಿಂದ 150ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳನ್ನು ತುಂಬಲಾಗಿದೆ. ಹೀಗಾಗಿ ಸಾಮರ್ಥ್ಯಕ್ಕೆ ಅನುಗುಣವಾಗಿ ಕೈದಿಗಳನ್ನು ಇರಿಸಲು, ಮುಕ್ತ ಕಾರಾಗೃಹ ಆರಂಭಿಸಲು ಮತ್ತು ಖಾಲಿಯಿರುವ ಸಿಬ್ಬಂದಿ ಹುದ್ದೆ ಭರ್ತಿ ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನಿರ್ದೇಶಿಸಬೇಕು. ಹಾಗೆಯೇ, ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆದು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ 2018ರ ಮೇ 8ರಂದು ಸೂಚಿಸಿದೆ. ಈ ನಿರ್ದೇಶನದ ಮೇರೆಗೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲಾಗಿದೆ. ಅರ್ಜಿ ಶೀಘ್ರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News