×
Ad

ಬೆಂಗಳೂರು: ಸಚಿವ ಸ್ಥಾನ ನೀಡಲು ಆಗ್ರಹಿಸಿ ನಗರದ ವಿವಿಧೆಡೆ ಪ್ರತಿಭಟನೆ

Update: 2018-06-09 20:10 IST

ಬೆಂಗಳೂರು, ಜೂ.9: ಸಚಿವ ಸ್ಥಾನ ವಂಚಿತರಾಗಿ ಅಸಮಾಧಾನಗೊಂಡಿರುವ ಶಾಸಕರ ಬೆಂಬಲಿಗರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್ ನಿವಾಸ ಸೇರಿದಂತೆ ಕೆಪಿಸಿಸಿ ಕಚೇರಿ ಹಾಗೂ ಟೌನ್‌ಹಾಲ್ ಮುಂದೆ ಪ್ರತಿಭಟನಾ ಧರಣಿ ನಡೆಸಿ, ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.

ಶನಿವಾರ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿವಾಸದ ಎದುರು ಜಮಾಯಿಸಿದ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಬೆಂಬಲಿಗರು ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.

ಈ ವೇಳೆ ಬೆಂಬಲಿಗರಿಂದ ಮನವಿ ಸ್ವೀಕರಿಸಿ ಮಾತನಾಡಿದ ಡಾ.ಜಿ.ಪರಮೇಶ್ವರ್, ಐವನ್ ಡಿಸೋಜಾ ಅವರು ಮೊದಲ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷ ಈಗಾಗಲೇ ವಿಧಾನ ಪರಿಷತ್‌ನಲ್ಲಿ ಸರಕಾರಿ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಪರಿಶೀಲಿಸೋಣ ಎಂದು ಭರವಸೆ ನೀಡಿದರು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಬಳಿ ಜಮಾಯಿಸಿದ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಬೆಂಬಲಿಗರು, ನಮ್ಮ ಶಾಸಕರು ಈ ಹಿಂದೆ ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಪಕ್ಷದಲ್ಲಿ ಹಿರಿಯ ಶಾಸಕರಾಗಿದ್ದಾರೆ. ಹೀಗಾಗಿ, ಅವರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ವಿಶ್ವನಾಥ್‌ಗೆ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ಕಾರ್ಯಕರ್ತರು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಟೌನ್‌ಹಾಲ್ ಮುಂಭಾಗದಲ್ಲಿ ಜಮಾಯಿಸಿದ ಒಕ್ಕೂಟದ ಕಾರ್ಯಕರ್ತರು ಶಾಸಕ ಎಚ್.ವಿಶ್ವನಾಥ್ ಹಿರಿಯ ಶಾಸಕ. ಅಲ್ಲದೇ, ಕುರುಬ ಸಮಾಜದ ಪ್ರಭಾವಿ ನಾಯಕರಾಗಿದ್ದಾರೆ. ಅವರ ರಾಜಕೀಯ ಅನುಭವ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲಲು ಎಚ್.ವಿಶ್ವನಾಥ್ ಹಗಲಿರುಳೆನ್ನದೆ ಪಕ್ಷ ಸಂಘಟನೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕುರುಬ ಸಮುದಾಯಕ್ಕೆ ಪ್ರಾತಿನಿದ್ಯ ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಮುಂದಿನ ಬಾರಿ ದೆಹಲಿಗೆ ತೆರಳಿದಾಗ ಇಲ್ಲಿನ ಪರಿಸ್ಥಿತಿಯನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿ, ವಿ.ಮುನಿಯಪ್ಪ ಅವರ ಪರವಾಗಿ ಮಾತುಕತೆ ನಡೆಸುತ್ತೇನೆ. ಜೊತೆಗೆ ಸಚಿವ ಸ್ಥಾನ ನೀಡುವಂತೆ ಶಿಫಾರಸ್ಸು ಮಾಡುತ್ತೇನೆ.
-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ

ವಿ.ಮುನಿಯಪ್ಪ ಹಿರಿಯ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ದೊರೆಯುತ್ತದೆ. ಹೀಗಾಗಿ, ತಾಳ್ಮೆ ಕಳೆದುಕೊಳ್ಳಬಾರದು. ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ನನ್ನನ್ನು 6 ತಿಂಗಳು ಸಚಿವ ಸಂಪುಟದಿಂದ ಹೊರಗಿಡಲಾಗಿತ್ತು.
-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News