ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2018-06-11 12:54 GMT

ಬೆಂಗಳೂರು, ಜೂ. 11: ಹಾಲಿ ಸಂಸದರಿರುವ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಾಲಿ ಕಾಂಗ್ರೆಸ್ ಸಂಸದರು ಇರುವ ಕ್ಷೇತ್ರಗಳನ್ನು ಬಿಟ್ಟುಕೊಡುವ ವಿಚಾರ ಚರ್ಚೆ ಆಗಿರುವ ಬಗ್ಗೆ ಮಾಹಿತಿ ಇಲ್ಲ.

ಸಭೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಣೆಯಾಗಿರುವ ಮಾಹಿತಿಯೂ ಇಲ್ಲ. ಸ್ಥಾನ ಹಂಚಿಕೆ ಬಗ್ಗೆ ಜೆಡಿಎಸ್ ಜತೆ ಸಮಾಲೋಚಿಸುತ್ತೇವೆ. ಸ್ಥಾನ ಹಂಚಿಕೆ ಬಗ್ಗೆ ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಎಷ್ಟು ಮಂದಿ ಶಾಸಕರಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಅವರೊಂದಿಗೆ ಮಾತನಾಡಿದ್ದೇನೆ, ಅವರಿಗೆ ಅಸಮಾಧಾನ ಇರುವ ವಿಚಾರ ನನಗೆ ಗೊತ್ತಿಲ್ಲ ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಚರ್ಚೆ ನಡೆದಿದೆ. ನಾನೂ ಹೈಕಮಾಂಡ್‌ಗೆ ಸಲಹೆ ನೀಡುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News