ಗಾಂಧಿ ಹತ್ಯೆಯ ಹಿಂದೆ ಆರೆಸ್ಸೆಸ್ ಹೇಳಿಕೆ: ವಿಚಾರಣೆ ಎದುರಿಸಲು ಸಿದ್ಧ ಎಂದ ರಾಹುಲ್ ಗಾಂಧಿ

Update: 2018-06-12 09:45 GMT

ಮುಂಬೈ, ಜೂ.12: ಗಾಂಧಿ ಹತ್ಯೆಯ ಹಿಂದೆ ಆರೆಸ್ಸೆಸ್ ಇದೆ ಎನ್ನುವ ಹೇಳಿಕೆಗೆ ಸಂಬಂಧಿಸಿ ಮಾನಹಾನಿ ಪ್ರಕರಣದ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, "ನಾನು ತಪ್ಪು ಮಾಡಿಲ್ಲ. ವಿಚಾರಣೆ ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.

ಭಿವಂಡಿ ಕೋರ್ಟ್ ಗೆ ಹಾಜರಾಗಿ ತನ್ನ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಅವರು, ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರದ ಬಗ್ಗೆ ತಾನು ನೀಡಿರುವ ಹೇಳಿಕೆಯ ಬಗ್ಗೆ ವಿಚಾರಣೆಗೆ ತಯಾರಾಗಿದ್ದೇನೆ ಎಂದು ಹೇಳಿದ್ದಾರೆ. 

2014ರಲ್ಲಿ ಕಾಂಗ್ರೆಸ್ ನ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ನ್ಯಾಯಾಲಯವು ಅವರಿಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು.

“ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಣದುಬ್ಬರ ಮತ್ತು ಇಂಧನ ಬೆಲೆ ಏರಿಕೆಯನ್ನು ಕುರಿತು ಮಾತನಾಡುವುದಿಲ್ಲ. ಅವರು ನನ್ನನ್ನು ಅನಗತ್ಯವಾಗಿ ಪ್ರಕರಣದಲ್ಲಿ ಸಿಲುಕಿಸುವ ಯತ್ನದಲ್ಲಿದ್ದಾರೆ. ಆದರೆ ನಾನು ಸೈದ್ಧಾಂತಿಕ ಹೋರಾಟವನ್ನು ಮುಂದುವರಿಸುತ್ತೇನೆ" ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News