ಬೆಂಗಳೂರು: ಜೂ.17 ರಂದು ಕೋಮುವಾದಿ ಶಕ್ತಿ ವಿರೋಧಿ ದಿನಾಚರಣೆ
ಬೆಂಗಳೂರು, ಜೂ.12: ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಾತಿವಾದಿ, ಕೋಮುವಾದಿ ಶಕ್ತಿ ವಿರೋಧಿ ದಿನವನ್ನು ಜೂ.17 ರಂದು ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡಲು ಕೋಮುವಾದಿ ಶಕ್ತಿಗಳು ಪ್ರಯತ್ನ ಪಡುತ್ತಿವೆ. ಮತ್ತೊಂದು ಕಡೆ ಜಾತಿಯ ಹೆಸರಿನಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮುದಾಯವನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಉತ್ತರ ಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮದ್ಯಪ್ರದೇಶ, ಅಸ್ಸಾಂ ಸೇರಿದಂತೆ ದೇಶದಾದ್ಯಂತ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯಗಳು ಹೆಚ್ಚಾಗುತ್ತಿವೆ. ದಲಿತ, ಆದಿವಾಸಿ ಮಹಿಳೆಯರ ಮೇಲೆ ಬಲಾತ್ಕಾರ ಪ್ರಕರಣಗಳು ಅಧಿಕವಾಗಿವೆ. ಮತ್ತೊಂದು ಕಡೆ ಸಂವಿಧಾನ ಬದಲಾವಣೆ ಮಾಡುವ ಸಲುವಾಗಿ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ಹೇಳಿಕೆ ನೀಡುವ ಮೂಲಕ ಸಂವಿಧಾನವನ್ನು ನಾಶ ಮಾಡಲು ಮುಂದಾಗಿದ್ದಾರೆ ಎಂದರು.
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ನಿರ್ನಾಮ ಮಾಡುವ ವ್ಯವಸ್ಥಿತ ಪಿತೂರಿ ನಡೆಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಯನ್ನು ದುರ್ಬಲ ಮಾಡಿ, ಶೋಷಿತರನ್ನು, ದಮನಿತರನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಇದರ ನಡುವೆ ಶೋಷಿತರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಶೋಷಿತರಲ್ಲಿ ಶಕ್ತಿ ತುಂಬುವ ಸಲುವಾಗಿ ಕೋಮುವಾದಿ ಶಕ್ತಿ ವಿರೋಧಿ ದಿನಾಚರಣೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್ ಉದ್ಘಾಟಿಸಲಿದ್ದು, ಅಂಕಣಕಾರ ನಟರಾಜ್ ಹುಳಿಯಾರ್, ಸಮಿತಿ ಮುಖಂಡರಾದ ಜೀವನಹಳ್ಳಿ ಆರ್. ವೆಂಕಟೇಶ್, ನಾರಾಯಣಪ್ಪ, ಚಿಂತಕ ರುದ್ರಪ್ಪ ಹನಗವಾಡಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.