ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ: ಇಬ್ಬರು ಪೊಲೀಸರು ಹುತಾತ್ಮ, ಸಿಆರ್‌ಪಿಎಫ್ ಯೋಧರಿಗೆ ಗಾಯ

Update: 2018-06-12 16:14 GMT

ಶ್ರೀನಗರ, ಜೂ. 12: ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದಲ್ಲಿ ಕಾವಲು ಕಾಯುತ್ತಿದ್ದ ಇಬ್ಬರು ಪೊಲೀಸರನ್ನು ಮಂಗಳವಾರ ನಸುಕಿನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಮಂಗಳವಾರ ನಸುಕಿನ ವೇಳೆ ಪುಲ್ವಾಮ ಪಟ್ಟಣದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಪೊಲೀಸರು ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟರು. ಘಟನೆ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘‘ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ನಮ್ಮ ಇಬ್ಬರು ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಭಯೋತ್ಪಾದಕರನ್ನು ಗುರುತಿಸಲಾಗಿದೆ. ಅವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು’’ ಎಂದು ಪುಲ್ವಾಮದ ಎಸ್‌ಎಸ್‌ಪಿ ಮುಹಮ್ಮದ್ ಅಸ್ಲಾಂ ಚೌಧರಿ ಹೇಳಿದ್ದಾರೆ.

ಇನ್ನೊಂದು ಘಟನೆಯಲ್ಲಿ ಸದಾರ್‌ನಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಹೊತ್ತಿಗೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಕೇಂದ್ರ ಮೀಸಲು ಪಡೆಯ 10 ಮಂದಿ ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಆಸ್ವತ್ರೆಗೆ ವರ್ಗಾಯಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News