ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ಪ್ರಯತ್ನ: ಸಚಿವ ಸಿ.ಪುಟ್ಟರಂಗ ಶೆಟ್ಟಿ

Update: 2018-06-13 14:33 GMT

ಬೆಂಗಳೂರು, ಜೂ.13: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ಎಲ್ಲ ಸಮುದಾಯಗಳಿಗೆ ಸರಕಾರದಿಂದ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018-19ನೆ ಸಾಲಿನ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2690 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಸಂಬಂಧ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

ದೇವರಾಜ ಅರಸು ನಿಗಮಕ್ಕೆ 293 ಕೋಟಿ ರೂ., ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ 52.28 ಕೋಟಿ ರೂ., ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 19 ಕೋಟಿ ರೂ., ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 2 ಕೋಟಿ ರೂ., ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 2 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಕಳೆದ ವರ್ಷ ಪ್ರಿ ಮೆಟ್ರಿಕ್‌ನ 30 ಲಕ್ಷ ವಿದ್ಯಾರ್ಥಿಗಳಿಗೆ 900 ಕೋಟಿ ರೂ.ವಿದ್ಯಾರ್ಥಿ ವೇತನ ನೀಡಲಾಗಿದೆ. ಈ ವರ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ 163 ಕೋಟಿ ರೂ., ವಿದ್ಯಾಸಿರಿ ಯೋಜನೆಯಡಿ 150 ಕೋಟಿ ರೂ.ಗಳನ್ನು ಖರ್ಚು ಮಾಡುವ ಗುರಿ ಹೊಂದಿದ್ದೇವೆ ಎಂದು ಪುಟ್ಟರಂಗ ಶೆಟ್ಟಿ ತಿಳಿಸಿದರು.

ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಇಲಾಖೆಯಲ್ಲಿನ ಕಾರ್ಯಕ್ರಮಗಳು, ಯೋಜನೆಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News