ವಾಸದ ಉದ್ದೇಶಕ್ಕೆ ನಕ್ಷೆ ಪಡೆದು ವಾಣಿಜ್ಯಕ್ಕೆ ಬಳಕೆ ಮಾಡಿದರೆ ಕ್ರಮ: ಡಿಸಿಎಂ ಡಾ.ಪರಮೇಶ್ವರ್
ಬೆಂಗಳೂರು, ಜೂ. 13: ಬೆಂಗಳೂರು ನಗರದಲ್ಲಿ ‘ವಾಸದ ಉದ್ದೇಶಕ್ಕಾಗಿ’ ನಕ್ಷೆ ಪಡೆದು ಕಟ್ಟಡ ನಿರ್ಮಿಸಿ ಅಲ್ಲಿ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಸರಕಾರ ಹಾಗೂ ಬಿಬಿಎಂಪಿಗೆ ವಂಚಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಇಂತಹ ಹಲವು ಪ್ರಕರಣಗಳು ನನ್ನ ಗಮನಕ್ಕೆ ಬಂದಿದ್ದು, ಇದರಿಂದ ಬಿಬಿಎಂಪಿಗೆ ಸಾವಿರಾರು ಕೋಟಿ ರೂ.ನಷ್ಟ ಉಂಟಾಗುತ್ತಿದೆ ಎಂದು ತಿಳಿಸಿದರು.
ಸರಕಾರ ಹಾಗೂ ಬಿಬಿಎಂಪಿಯನ್ನು ವಂಚಿಸುತ್ತಿರುವವರನ್ನು ಪತ್ತೆ ಹಚ್ಚಲು ಆಂದೋಲನ ನಡೆಸಬೇಕಿದೆ. ಇದರಿಂದ ಬಿಬಿಎಂಪಿಗೆ ಕೋಟ್ಯಂತರ ರೂ. ಆದಾಯವೂ ಬರಲಿದೆ ಎಂದ ಅವರು, ವಾಸಕ್ಕೆ ನಕ್ಷೆ ಪಡೆದು ವಾಣಿಜ್ಯ ಉದ್ದೇಶಕ್ಕೆ ಯಾರೊಬ್ಬರು ಬಳಕೆ ಮಾಡಬಾರದು ಎಂದರು.
ಭ್ರಷ್ಟಾಚಾರಕ್ಕೆ ಕಡಿವಾಣ: ಮುಖ್ಯಮಂತ್ರಿ ಕುಮಾರಸ್ವಾಮಿ ಭ್ರಷ್ಟಾಚಾರದ ಬಗ್ಗೆ ಯಾವ ಕಾರಣಕ್ಕಾಗಿ ಹೇಳಿಕೆ ನೀಡಿದರೋ ಗೊತ್ತಿಲ್ಲ. ಆದರೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಮತ್ತು ಎಸಿಬಿಯಂತಹ ಸಂಸ್ಥೆಗಳು ಕ್ರಮ ವಹಿಸಲಿವೆ ಎಂದು ಪರಮೇಶ್ವರ್ ಹೇಳಿದರು.
ಲಾಬಿಗೆ ಅವಕಾಶವಿಲ್ಲ: ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಂಬಂಧ ಯಾವುದೇ ಲಾಬಿಗೆ ಅವಕಾಶ ನೀಡುವುದಿಲ್ಲ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಇನ್ನು ಮುಂದೆ ಲಾಬಿ ನಡೆಸುವಂತಿಲ್ಲ. ಗುತ್ತಿಗೆದಾರರಿಗೆ ನೀಡಬೇಕಾದ ಹಣವನ್ನು ಪ್ರತ್ಯೇಕವಾಗಿ ತೆಗೆದಿಡಲಾಗುವುದು ಎಂದರು.
ಕಗ್ಗದಾಸಪುರ ಮತ್ತು ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲ್ಲ ಸಮಸ್ಯೆಗಳನ್ನು ಪರಿಹರಿಸಲು 3 ತಿಂಗಳ ಕಾಲಾವಕಾಶ ನೀಡಿದ್ದೇನೆ. ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿ, ಹಣಕಾಸು ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದೇವೆ ಎಂದ ಅವರು, ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಇತ್ತೀಚೆಗೆ ಸುರಿದ ಮಳೆ ಹಿನ್ನೆಲೆಯಲ್ಲಿ ಕೆಲ ರಸ್ತೆಗಳಲ್ಲಿನ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚುವಂತೆ ಸೂಚಿಸಿದ್ದೇನೆ. ಈಗಾಗಲೇ ರಸ್ತೆಗಳಲ್ಲಿನ ಗುಂಡಿಗಳ ಮುಚ್ಚುವ ಕಾರ್ಯ ಆರಂಭವಾಗಿದೆ ಎಂದ ಅವರು, ನಗರದ ಜನರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಸ್ಥೆ ವಹಿಸಲಾಗುವುದು ಎಂದರು.
‘ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ಎಸ್‌ಐಟಿ ತಂಡ ವಿಜಯಪುರ ಮೂಲದ ಪರಶುರಾಮ್ ವಾಗ್ಮೋರೆ ಎಂಬವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ. ತನಿಖೆ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ಈ ಬಗ್ಗೆ ಹೆಚ್ಚಿನ ವಿಚಾರಗಳನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ’
-ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ