ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಭಡ್ತಿಗೆ ಆಗ್ರಹ

Update: 2018-06-14 14:40 GMT

ಬೆಂಗಳೂರು, ಜೂ.14: ಇಲಾಖಾ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ರಾಜ್ಯ ಸಚಿವ ಸಂಪುಟದಲ್ಲಿ ತಿದ್ದುಪಡಿ ಮಾಡುವ ಮೂಲಕ ಪದವೀಧರ ಅಂಗನವಾಡಿ ಕಾರ್ಯಕರ್ತೆಯರಿಗೆ ಜೇಷ್ಠತೆ ಆಧಾರದ ಮೇಲೆ ಭಡ್ತಿ ನೀಡಬೇಕು ಎಂದು ರಾಜ್ಯ ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ತನುಜ, ಅಂಗನವಾಡಿಗಳಲ್ಲಿ ಕೆಲಸ ಮಾಡುತ್ತಿರುವ ಪದವೀಧರರನ್ನು ರಾಜ್ಯ ಸಚಿವ ಸಂಪುಟದಲ್ಲಿ ಸಿ ಅಂಡ್ ಆರ್ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿ ಖಾಯಂ ಮಾಡುವ ಮೂಲಕ ಜೇಷ್ಠತೆ ಆಧಾರದ ಮೇಲೆ ಭಡ್ತಿ ನೀಡಲು ಅವಕಾಶ ನೀಡಬೇಕು ಎಂದು 2015 ರಲ್ಲಿಯೇ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಆದರೆ, ಇದುವರೆಗೂ ರಾಜ್ಯ ಸರಕಾರ ಅದನ್ನು ಪರಿಗಣಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ 1500 ಕ್ಕೂ ಅಧಿಕ ಪದವೀಧರ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಸರಕಾರ ಇವರನ್ನು ಗೌರವಧನ ನೀಡುವ ಮೂಲಕ ಗುತ್ತಿಗೆ ಕಾರ್ಮಿಕರು ಎಂದು ಪರಿಗಣಿಸಲಾಗಿದೆ. ಆದುದರಿಂದಾಗಿ ಭಡ್ತಿ ನೀಡಲು ಸಾಧ್ಯವಾಗುವುದಿಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಆದುದರಿಂದಾಗಿ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿ ಪದವೀಧರರನ್ನು ಖಾಯಂ ಮಾಡಿದರೆ ನಾವು ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

2015 ರಲ್ಲಿ ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ್ದರೂ, ಅದನ್ನು ಪರಿಗಣಿಸದೇ ಕೆಪಿಎಸ್‌ಸಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ನೀಡಿ, ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಅನಂತರ 2016 ರಲ್ಲಿಯೂ ಎರಡು ಬಾರಿ ಪರೀಕ್ಷೆ ನಡೆಸಲಾಗಿತ್ತು. ಆದರೆ, ನಾವು ಮೇಲ್ವಿಚಾರಕಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಲು ಅರ್ಹರಿದ್ದರೂ ನಮಗೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಹತ್ತಾರು ವರ್ಷಗಳ ಕಾಲ ಅನುಭವವಿರುವ ಪದವೀಧರರಿಗೆ ಅನ್ಯಾಯವಾಗುತ್ತಿದೆ. ಸರಕಾರ ಕೂಡಲೇ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News