ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

Update: 2018-06-14 15:15 GMT

ಬೆಂಗಳೂರು, ಜೂ.14: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ವಿಚಾರಣೆಗಾಗಿ ಮತ್ತೆ 14 ದಿನಗಳವರೆಗೆ ಸಿಟ್(ಎಸ್‌ಐಟಿ) ಕಸ್ಟಡಿಗೆ ನೀಡಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

ವಿಚಾರವಾದಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಲಾಗಿದ್ದ ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜಿತ್ ಕುಮಾರ್ ಯಾನೆ ಪ್ರವೀಣ್(37), ಮಹಾರಾಷ್ಟ್ರದ ಅಮೋಲ್ ಕಾಳೆ, ಅಮಿತ್ ದೇಗ್ವೇಕರ್ ಯಾನೆ ಪ್ರದೀಪ್(38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪಯಡವೆ ಯಾನೆ ಮನೋಜ್(29) ಎಂಬಾತನನ್ನು ಗೌರಿ ಹತ್ಯೆ ಪ್ರಕರಣದಲ್ಲೂ ಸಿಟ್ ಅಧಿಕಾರಿಗಳು ಬಂಧಿಸಿದ್ದರು.

ಮೇ ತಿಂಗಳ ಕೊನೆಯ ವಾರದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ 10 ದಿನಗಳವರೆಗೆ ಕಸ್ಟಡಿಗೆ ಪಡೆದಿದ್ದರು. ಅವಧಿ ಮುಕ್ತಾಯವಾಗಿದ್ದರಿಂದ ಆರೋಪಿಗಳನ್ನು ಗುರುವಾರ ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿಲ್ಲ. ಅವರನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡಬೇಕು ಎಂದು ಸಿಟ್ ಅಧಿಕಾರಿಗಳು ಮನವಿ ಮಾಡಿದರು. ಅದನ್ನು ನ್ಯಾಯಾಲಯ ಪುರಸ್ಕರಿಸಿ, 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News