ರಾಜ್ಯಾದ್ಯಂತ ಈದುಲ್ ಫಿತ್ರ್ ಸಂಭ್ರಮಾಚರಣೆ

Update: 2018-06-18 11:37 GMT

ಬೆಂಗಳೂರು, ಜೂ. 16: ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಸ್ಲಿಮರು ಪವಿತ್ರ ಈದ್ ಉಲ್ ಫಿತ್ರ್ ಹಬ್ಬವನ್ನು ಶನಿವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಬೆಂಗಳೂರಿನ ಜಯಮಹಲ್‌ನಲ್ಲಿರುವ ಖುದ್ದೂಸ್ ಸಾಬ್ ಈದ್ಗಾ ಮೈದಾನದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಹಾಗೂ ಹಾಲಿ ಶಾಸಕ ರೋಷನ್ ಬೇಗ್, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹೀಂ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

ಇಲ್ಲಿನ ಮೈಸೂರು ರಸ್ತೆಯ ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪಾಲ್ಗೊಂಡಿದ್ದರು. ಅದೇ ರೀತಿಯಲ್ಲಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಜಯನಗರ, ಆರ್‌ಟಿ ನಗರ, ಯಶವಂತಪುರ ಸೇರಿ ನಗರದ ವಿವಿಧ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅದೇ ರೀತಿ ವಿಜಯಪುರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ಕೋರಿದರು. ಬೀದರ್ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು. ಸಚಿವ ಬಂಡೆಪ್ಪಕಾಶೆಂಪುರ ಶುಭ ಕೋರಿದರು.

ಕಲಬುರಗಿ, ಬಳ್ಳಾರಿ, ಧಾರವಾಡ, ಕೋಲಾರ, ರಾಯಚೂರು, ಚಿಕ್ಕಬಳ್ಳಾಪುರ, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುನ್ನಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News