ನೀತಿ ಆಯೋಗದ ಸಭೆ : ಮುಖ್ಯಮಂತ್ರಿ ಕುಮಾರಸ್ವಾಮಿ ದಿಲ್ಲಿಗೆ ಪ್ರಯಾಣ

Update: 2018-06-16 14:56 GMT

ಬೆಂಗಳೂರು, ಜೂ. 16: ಹೊಸದಿಲ್ಲಿಯಲ್ಲಿ ಜೂ.17 ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮಧ್ಯಾಹ್ನ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಿಲ್ಲಿಗೆ ಪ್ರಯಾಣ ಬೆಳೆಸಿದರು.

ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯವಿರಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಳೆ ಬೆಳಗ್ಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಣಕಾಸು ಸಚಿವರು, ಕೇಂದ್ರ ಸಚಿವರುಗಳು ಭಾಗವಹಿಸಲಿದ್ದು, ಕೃಷಿ ಸುಧಾರಣೆ, ಅಪೌಷ್ಠಿಕತೆ ನಿವಾರಣೆ, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯುವ ಸಾಧ್ಯತೆಗಳಿವೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದ ಮುಖ್ಯಮಂತ್ರಿಯಾದ ಮೇಲೆ ಕುಮಾರಸ್ವಾಮಿ ಕೇಂದ್ರ ಸರಕಾರದ ಮಟ್ಟದಲ್ಲಿ ನಡೆಯುತ್ತಿರುವ ಮೊದಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿಂದೆ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ಮೋದಿಯವರನ್ನು ಔಪಚಾರಿಕವಾಗಿ ಭೇಟಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News