ದೋಷಾರೋಪಣಾ ಪಟ್ಟಿ ಸಲ್ಲಿಕೆ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2018-06-18 16:50 GMT

ಬೆಂಗಳೂರು, ಜೂ.18: ಕನಕಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 52 ಲಕ್ಷ ರೂ.ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಸರಕಾರದ ಪರ ವಾದಿಸಿದ ವಕೀಲರು, ಕನಕಪುರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಂದ ನಡೆದಿದೆ ಎನ್ನಲಾದ ಹಣ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕನಕಪುರದ ಪೊಲೀಸ್ ಠಾಣಾ ಅಧಿಕಾರಿಗಳು ಕನಕಪುರದ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿಯನ್ನು ಇತ್ಯರ್ಥಪಡಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ವಿಭಾಗೀಯ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.

ಪ್ರಕರಣವೇನು: ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಅವರು ಕನಕಪುರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಗಳು 52 ಲಕ್ಷ ರೂ.ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಈ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಕನಕಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಆದರೂ ಕನಕಪುರ ಠಾಣಾ ಪೊಲೀಸರು ಯಾವುದೆ ತನಿಖೆಯನ್ನೂ ನಡೆಸಿರಲಿಲ್ಲ. ಅಲ್ಲದೆ, ಕೋರ್ಟ್‌ಗೆ ದೋಷಾರೋಪಣಾ ಪಟ್ಟಿಯನ್ನೂ ಸಲ್ಲಿಸಿರಲಿಲ್ಲ. ಹೀಗಾಗಿ, ರವಿಕುಮಾರ್ ಅವರು ಹೈಕೋರ್ಟ್‌ಗೆ ಪಿಐಎಲ್ ಅರ್ಜಿಯನ್ನು ಸಲ್ಲಿಸಿದ್ದರು. ಜೂ.18ರಂದು ಸರಕಾರದ ಪರ ವಕೀಲರು ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News