ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣ ಹೆಚ್ಚಳಕ್ಕೆ ಚಿಂತನೆ: ಸಚಿವ ಝಮೀರ್ ಅಹ್ಮದ್ ಖಾನ್

Update: 2018-06-19 13:02 GMT

ಬೆಂಗಳೂರು, ಜೂ. 19: ಬಿಪಿಎಲ್ ಪಡಿತರ ಚೀಟಿದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಪ್ರತಿ ವ್ಯಕ್ತಿಗೆ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲಿ ಮಾತನಾಡಿದ ಅವರು, ಪ್ರತಿ ವ್ಯಕ್ತಿಗೆ ತಲಾ 2 ಕೆಜಿ ಅಕ್ಕಿಯನ್ನು ಹೆಚ್ಚಿಸಲು ಉದ್ದೇಶಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಸಮಾಧಾನ: ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ 19 ರೂ.ಗಳಿಗೆ ಸಿಗುತ್ತಿರುವ ರಾಗಿಯನ್ನು 25.47ರೂ.ಗೆ ಖರೀದಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಸರಿಯಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಹಳೆ ಮೈಸೂರು ಭಾಗದಲ್ಲಿ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ, 2 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ಅದೇ ರೀತಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಅಕ್ಕಿ ಮತ್ತು ಜೋಳ ವಿತರಣೆ ಮಾಡಲಾಗುತ್ತಿದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಮತ್ತೊಮ್ಮೆ ಅವಕಾಶ: ಪಡಿತರ ಚೀಟಿಗೆ ಆಧಾರ್ ಜೋಡಣೆಗೆ ಕೇಂದ್ರ ಸರಕಾರ ಆದೇಶಿಸಿದ್ದು, ಅದರನ್ವಯ ಕುಟುಂಬದ ಎಲ್ಲ ಸದಸ್ಯರ ಆಧಾರ್ ಸಂಖ್ಯೆ ಜೋಡಣೆಗೆ ಮತ್ತೆ ಅವಕಾಶ ಕಲ್ಪಿಸಲಾಗುವುದು. ಇನ್ನೂ 6 ತಿಂಗಳು ಕಾಲಾವಕಾಶ ಕಲ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News