ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ: ಕೃಷಿ ಸಚಿವ ಶಿವಶಂಕರರೆಡ್ಡಿ

Update: 2018-06-19 13:49 GMT

ಬೆಂಗಳೂರು, ಜೂ.19: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿದ್ದಾರೆ.

ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ವತಿಯಿಂದ ಆಯೋಜಿಸಿದ್ದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಇತ್ತೀಚೆಗೆ ವಿಜ್ಞಾನದ ಬಗ್ಗೆ ಓದುವ ಹವ್ಯಾಸ ಕಡಿಮೆ ಆಗುತ್ತಿದೆ. ಆದುದರಿಂದಾಗಿ ಶಿಕ್ಷಕರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಕಡುಬಡತನದ ಕುಟುಂಬದಲ್ಲಿ ಜನಿಸಿ, ಸಮಾಜಮುಖಿಯಾಗಿ ಕೆಲಸ ಮಾಡಿದ ಎಚ್.ನರಸಿಂಹಯ್ಯ ಅವರ ಮೌಲ್ಯಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗಿದೆ. ಅಲ್ಲದೆ, ಅವರು ಜೀವನದುದ್ದಕ್ಕೂ ಸರಳವಾಗಿ ಇತರರಿಗೆ ಮಾದರಿಯಾಗುವಂತೆ ಜೀವನ ನಡೆಸಿದರು. ಅವರನ್ನು ಆದರ್ಶವಾಗಿ ಪಡೆಯಬೇಕು ಎಂದು ಸಲಹೆ ನೀಡಿದರು.

ನ್ಯಾಷನಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ.ಎ.ಎಚ್.ರಾಮರಾವ್ ಮಾತನಾಡಿ, ಇಲ್ಲಿನ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದ ಸಾವಿರಾರು ವಿದ್ಯಾರ್ಥಿಗಳು ದೇಶ, ವಿದೇಶಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆದಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿತ ನಂತರ ಶಾಲೆ ಮತ್ತು ಹುಟ್ಟಿದ ಊರನ್ನು ಮರೆಯಬಾರದು. ಎಚ್.ಎನ್.ಅವರ ತತ್ವ ಸಿದ್ಧಾಂತಗಳನ್ನು ನಾವು ರೂಢಿಸಿಕೊಳ್ಳಬೇಕು ಎಂದರು.

ಹಳೇ ವಿದ್ಯಾರ್ಥಿಗಳು ಮತ್ತು ನಿವೃತ್ತ ಶಿಕ್ಷಕರ ಅಪೂರ್ವ ಸಮ್ಮಿಲನವಾಗಿತ್ತು. ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಚ್.ವಿ.ನಾಗೇಶ್, ವೆಂಕಟರತ್ನಮ್ಮ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News