ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಪರಿಶೀಲನೆಗೆ ಸಮಯಾವಕಾಶ ಕೋರಿದ ಕೇಂದ್ರ ಸರಕಾರ

Update: 2018-06-19 15:55 GMT

ಬೆಂಗಳೂರು, ಜೂ.19: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ಇನ್ನಷ್ಟು ಸಮಯಾವಕಾಶ ನೀಡುವಂತೆ ಕೇಂದ್ರ ಸರಕಾರ ಹೈಕೋರ್ಟ್‌ಗೆ ಮಂಗಳವಾರ ಮನವಿ ಮಾಡಿದೆ.

ಈ ಕುರಿತಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ನಾವದಗಿ ಅವರ ಮನವಿಯನ್ನು ಮನ್ನಿಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರ ಶಶಿಧರ ಶಾನುಭೋಗ ಅವರ ಪರ ವಕೀಲ ಗುರುಮಠ ಅವರು, ಈಗಾಗಲೇ ಈ ಹಿಂದಿನ ಕೇಂದ್ರ ಸರಕಾರ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ 2013ರ ನವೆಂಬರ್ 14ರಂದು ಬರೆದಿರುವ ಪತ್ರದಲ್ಲಿ, ಜನಗಣತಿಯಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಕಾಲಂ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಹೀಗಾಗಿ, ಮತ್ತೆ ಪರಿಶೀಲನೆಗೆ ಕಾಲಾವಕಾಶ ಕೋರಿಕೆ ಅನಗತ್ಯ ಎಂದು ಪ್ರತಿಪಾದಿಸಿದರು.

ಮತ್ತೊಬ್ಬ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು, ಕೇಂದ್ರ ಸರಕಾರದ ನಡೆ ಈ ಪ್ರಕರಣದ ಮೇಲೆ ಪರಿಣಾಮ ಬೀರುವುದಿಲ್ಲ. ಮೂಲಭೂತವಾಗಿ ನಾವು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕ್ರಮವನ್ನು ಪ್ರಶ್ನಿಸಿರುವುದು ಎಂದರು.

ಅರ್ಜಿದಾರರ ಮನವಿಯಲ್ಲಿ ಏನಿದೆ: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದ ತಜ್ಞರ ಸಮಿತಿ ರಚನೆ ಮಾಡಿರುವ ಆಯೋಗದ ಕ್ರಮವನ್ನು ರದ್ದುಗೊಳಿಸಬೇಕು ಎಂಬುದು ಅರ್ಜಿದಾರರ ಮನವಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News