ಜೂ.27ಕ್ಕೆ ಅರಮನೆ ಮೈದಾನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಚಿವ ಡಿ.ಕೆ.ಶಿವಕುಮಾರ್

Update: 2018-06-20 13:51 GMT

ಬೆಂಗಳೂರು, ಜೂ. 20: ಬೆಂಗಳೂರು ನಿರ್ಮಾರ್ತೃ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27ರಂದು ನಗರದ ಅರಮನೆ ಮೈದಾನದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನ 5 ಗೋಪುರದಿಂದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳವರು ಬಂದು ಅಲ್ಲಿಂದ ಮೆರವಣಿಗೆ ಮೂಲಕ ಸಮಾರಂಭ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದರು.

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗದೆ ನಾಡಿನ ಎಲ್ಲರ ಜಯಂತಿಯಾಗಿ ರೂಪುಗೊಳ್ಳಬೇಕು. ಆ ನಿಟ್ಟಿನಲ್ಲಿ ಹೋರಾಟಗಾರರು, ಸಂಘಟನೆಗಳ ಮುಖ್ಯಸ್ಥರು, ಕಲಾವಿದರು ಹಾಗೂ ಸಾರ್ವಜನಿಕರು ಸಮಾರಂಭಕ್ಕೆ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಬೆಂಗಳೂರು ನಗರದ ಎಲ್ಲ ಶಾಸಕರು, ಪಾಲಿಕೆ ಸದಸ್ಯರು ಈ ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದ ಅವರು, ಜೂ.27ರ ಮಧ್ಯಾಹ್ನ 12ಗಂಟೆಗೆ ಅರಮನೆ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ಆರಂಭವಾಗಲಿದೆ ಎಂದರು.

ಈ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ 65 ಲಕ್ಷ ರೂ.ಹಣ ನೀಡುತ್ತಿದ್ದು, ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದ ಅವರು, ಒಕ್ಕಲಿಗರ ಸಂಘ ಈ ಕಾರ್ಯಕ್ರಮಕ್ಕೆ 50 ಲಕ್ಷ ರೂ.ಹಣ ವಿನಿಯೋಗಿಸುತ್ತಿದೆ ಎಂದರು.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ಸಂಶೋಧನಾ ಕೇಂದ್ರಕ್ಕೆ ನಗರದಲ್ಲಿ 5 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ತಾತ್ಕಾಲಿಕವಾಗಿ ನಗರದ ಮೇಯೋಹಾಲ್‌ನಲ್ಲಿ ಕಚೇರಿ ಪ್ರಾರಂಭಿಸಲಾಗಿದೆ ಎಂದ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಯಂತಿ ಆಚರಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ, ಬಿಬಿಎಂಪಿ ಮೇಯರ್ ಸಂಪತ್ ರಾಜ್, ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್.ವಿಶು ಕುಮಾರ್, ಸಾಹಿತಿಗಳು, ತಜ್ಞರು, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

‘ನಗರದ ವಿವಿಧೆಡೆ ಕೆಂಪೇಗೌಡ ಅವರ ಪ್ರತಿಮೆಗಳ ಸ್ಥಾಪನೆ, ನಗರದ ವಿವಿಗೆ ಕೆಂಪೇಗೌಡರ ಹೆಸರಿಡುವಂತೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಸ್ಥಳದಲ್ಲೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಕುರಿತು ಹಲವು ಪ್ರಕ್ರಿಯೆಗಳಿದ್ದು, ಕಾನೂನು ಚೌಕಟ್ಟಿನಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’
-ಡಿ.ಕೆ.ಶಿವಕುಮಾರ್ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News