ಕೇಂದ್ರ ಸರಕಾರದಿಂದ ಐಟಿ, ಇಡಿ ದುರುಪಯೋಗ: ಡಾ.ಜಿ.ಪರಮೇಶ್ವರ್

Update: 2018-06-21 16:15 GMT

ಬೆಂಗಳೂರು, ಜೂ. 21: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಐಟಿ, ಸಿಬಿಐ, ಇಡಿ ಇಲಾಖೆಗಳನ್ನು ದುರುಪಯೋಗ ಮಾಡಿಕೊಂಡು ರಾಜ್ಯದಲ್ಲಿ ಹಲವು ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ನಡೆಸುತ್ತಿದೆ ಎಂದು ಉಪಮುಖ್ಯಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಬಹುಮಹಡಿ ವಾಹನ ಕಟ್ಟಡಗಳ ಪರಿಶೀಲನೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಹಲವು ಇಲಾಖೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ದಾಳಿ ನಡೆಸುತ್ತಿರುವುದು ನಮಗೆ ಈಗಾಗಲೇ ಸಾಬೀತಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ನ್ನು ಗುರಿಯಾಗಿಸಿಕೊಂಡು ಕಳೆದ ಕೆಲವು ತಿಂಗಳಿಂದ ದಾಳಿಗಳು ನಡೆಸಲಾಗುತ್ತಿದೆ. ಸಚಿವ ಡಿ.ಕೆ.ಶಿವಕುಮಾರ್ ಮೇಲೂ ದಾಳಿ ನಡೆಯುತ್ತಿದೆ. ಅವರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ತನ್ನ ಬಳಿಯಿದ್ದ ಪತ್ರಗಳನ್ನೆಲ್ಲಾ ಐಟಿ ಇಲಾಖೆಗೆ ನೀಡಿದ್ದಾರೆ. ತನಿಖೆ ಮುಗಿದ ಬಳಿಕ ತಪ್ಪಿತಸ್ಥ ಎಂದು ಸಾಬೀತಾದರೆ, ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಅದು ಬಿಟ್ಟು, ಸುಖಾ ಸುಮ್ಮನೆ ದಾಳಿ ನಡೆಸುವುದು ಹಾಗೂ ಬಿಜೆಪಿ ಅವರನ್ನು ರಾಜೀನಾಮೆ ನೀಡಿ ಎಂದು ಹೇಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಪರಮೇಶ್ವರ್ ಭವಿಷ್ಯ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News