ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜೂ.22: ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಡಾ.ಎನ್.ರಾಮಚಂದ್ರ ಸ್ವಾಮಿ ಅವರ ಹೆಸರು ಪರಿಗಣಿಸುವ ವಿಚಾರ ಸಂಬಂಧ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ತಮ್ಮನ್ನು ನೇಮಿಸುವಂತೆ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಕೋರಿ ಡಾ.ಎನ್.ರಾಮಚಂದ್ರ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿ ಮಾಡಿ, ಒಂದು ವಾರ ವಿಚಾರಣೆ ಮುಂದೂಡಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಯಾವುದೇ ಆರೋಪಗಳಿಗೆ ಗುರಿಯಾಗದೆ ಸುದೀರ್ಘ 37 ವರ್ಷ ಸೇವೆ ಸಲ್ಲಿಸಿದ್ದೇನೆ. ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆ ನಿರ್ವಹಿಸಿದ್ದೇನೆ. ಇನ್ನು ಅನೇಕ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗೆ ನನ್ನ ಹೆಸರು ಹಲವು ಬಾರಿ ಶಾರ್ಟ್‌ಲಿಸ್ಟ್ ಮಾಡಲಾಗಿತ್ತು. ಆದರೆ, ನಿಗದಿತ ಎಲ್ಲ ಅರ್ಹತೆ ಹೊಂದಿರುವ ಹೊರತಾಗಿಯೂ ತಮ್ಮನ್ನು ಕುಲಪತಿಯಾಗಿ ನೇಮಕ ಮಾಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಅಲ್ಲದೆ, ನಕಲಿ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸಲ್ಲಿಸಿದ ಮತ್ತು ಅಂಕಪಟ್ಟಿ ಹಗರಣದಲ್ಲಿ ಭಾಗಿಯಾದವರನ್ನು ಕುಲಪತಿ ಹುದ್ದೆಗೆ ನೇಮಿಸಲಾಗಿದೆ. ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಸ್ಥಾನಕ್ಕೆ ನೇಮಕ ಬಯಸಿ ನಾನು 2018ರ ಮಾ.19ರಂದು ಅರ್ಜಿ ಸಲ್ಲಿಸಿದ್ದೇನೆ. ಆದರೆ. ನನ್ನ ಅರ್ಜಿ ಪರಿಗಣಿಸಿಲ್ಲ. ಹೀಗಾಗಿ, ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ನನ್ನನ್ನು ಪರಿಗಣಿಸುವಂತೆ ರಾಜ್ಯ ಸರಕಾರ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ರಾಮಚಂದ್ರ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.