ಉದ್ಯೋಗ ಖಾತ್ರಿ ಯೋಜನೆಯಡಿ 10 ಕೋಟಿ ಮಾನವ ದಿನಗಳ ಸೃಷ್ಟಿ: ಸಚಿವ ಕೃಷ್ಣಬೇರೈಗೌಡ
ಬೆಂಗಳೂರು, ಜೂ.23: ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 10 ಕೋಟಿ ಮಾನವ ದಿನಗಳನ್ನು ಸೃಷ್ಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಯಾರೊಬ್ಬರು ನಿರುದ್ಯೋಗದಿಂದ ಕೂರಬಾರದು. ಈ ನಿಟ್ಟಿನಲ್ಲಿ ನರೇಗಾದಲ್ಲಿ 3500ಕೊಟಿ ರೂ.ವೆಚ್ಚದಲ್ಲಿ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 17 ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಉದ್ದೇಶಲಾಗಿದ್ದು, ಈಗಾಗಲೆ 13ಸಾವಿರ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1110 ಘಟಕಗಳು ಕೆಟ್ಟ ಹೋಗಿದ್ದು, ಜು.15ರೊಳಗೆ ದುರಸ್ಥಿ ಮಾಡುವಂತೆ ಸೂಚಿಸಲಾಗಿದೆ. ಇನ್ನು 3ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದರು.
ಕೇಂದ್ರ ಸರಕಾರ ಸ್ವಚ್ಚತಾ ಅಭಿಯಾನದ ಅಂಗವಾಗಿ ಅ.2 ರೊಳಗೆ ದೇಶದ ಎಲ್ಲ ರಾಜ್ಯಗಳನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಿ ಘೋಷಿಸಬೇಕೆಂದು ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಅ.2 ರ ಒಳಗಾಗಿ ರಾಜ್ಯದ ಎಲ್ಲ ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಿ ಘೋಷಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ 5-6 ಜಿಲ್ಲೆಗಳನ್ನು ಬಿಟ್ಟರೆ ಉಳಿದ ಜಿಲ್ಲೆಗಳು ಗುರಿಸಾಧಿಸಿವೆ ಎಂದು ಅವರು ಹೇಳಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜು.1ರ ಒಳಗಾಗಿ ಕ್ರಿಯಾ ಯೋಜನೆ ತಯಾರಿಸಿ ಸರಕಾರಕ್ಕೆ ಕಳಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಳೆಯಿಂದ ಹಾನಿಗೊಳಗಾಗಿರುವ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯ ಬೇಗ ಮಾಡಿ ಈ ಕಾರ್ಯಕ್ಕೆ ಪ್ರಕೃತಿ ಕೋಪ ನಿಧಿಯಿಂದ ಹಣ ಪಡೆಯಿರಿ ಎಂದು ಸಲಹೆ ನೀಡಿದರು.
ಕಳೆದ 2 ವರ್ಷದಿಂದ ರಾಜ್ಯದಲ್ಲಿ ಬರಗಾಲ ಇದ್ದು, ಈ ಅವಧಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ರಾಜ್ಯದಲ್ಲಿ ಚೆನ್ನಾಗಿ ನಡೆದಿದೆ. ಇತ್ತೀಚೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ಯೋಜನೆ ಮೇಲೆ ಅವಲಂಬನೆ ಕಡಿಮೆಯಾಗುತ್ತಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೊಸದಾಗಿ ಕ್ರಿಯಾ ಯೋಜನೆ ತಯಾರಿಸಿ ತಮ್ಮ ಜಿಲ್ಲೆಗಳಲ್ಲಿ ಹೆಚ್ಚು ಗಿಡಗಳನ್ನು ನೆಡುವುದು ಸೇರಿದಂತೆ ತೋಟಗಾರಿಕೆ ಅಭಿವೃದ್ಧಿ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.