ಕೋಟದಲ್ಲಿ ಸ್ವರಾಜ್ ಸಂಗಮ-ರಜತ ಸಂಭ್ರಮ

Update: 2018-06-23 17:23 GMT

ಉಡುಪಿ, ಜೂ.23: ಕೋಟತಟ್ಟು ಗ್ರಾಪಂ ಹಾಗೂ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಇವುಗಳ ಜಂಟಿ ಆಶ್ರಯದಲ್ಲಿ ಗ್ರಾಮ ಸ್ವರಾಜ್ ಪಂಚಾಯತ್ ಸಬಲೀಕರಣ ಪುರಸ್ಕಾರ-2018 ಹಾಗೂ ಸ್ವರಾಜ್ ಸಂಗಮ-ರಜತ ಸಂಭ್ರಮ ಜೂ.29ರಂದು ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಪಂಚಾಯತ್‌ರಾಜ್ ಸಬಲೀಕರಣದ ಕುರಿತಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಸಕರು, ಸಂಸದರು ಹಾಗೂ ಸಮಸ್ತ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಅಲ್ಲದೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಒಟ್ಟು 10 ಗ್ರಾಪಂಗಳನ್ನು ಆಯ್ಕೆ ಮಾಡಿ ಪುರಸ್ಕರಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಜೂ.29ರ ಬೆಳಗ್ಗೆ 10ಗಂಟೆಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸುವರು. ಕೋಟತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸುವರು. ಮಂಗಳೂರಿನ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಎರಡೂ ಜಿಲ್ಲೆಗಳಲ್ಲಿ ಎಲ್ಲಾ ಶಾಸಕರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಇವರೊಂದಿಗೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಚಂದ್ರ ಶೆಟ್ಟಿ, ಉಭಯ ಜಿಲ್ಲೆಗಳ ಜಿಪಂ ಅಧ್ಯಕ್ಷರಾದ ದಿನಕರ ಬಾಬು ಹಾಗೂ ಮೀನಾಕ್ಷಿ ಶಾಂತಿಗೋಡು ಭಾಗವಹಿಸಲಿದ್ದಾರೆ ಎಂದು ಕೋಟ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕೋಟತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ, ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News