ಸಾವಯವ ಕೃಷಿಯಿಂದ ಉತ್ತಮ ಫಸಲು ಪಡೆಯಲು ಸಾಧ್ಯ: ಸಂಸದೆ ಶೋಭಾ ಕರಂದ್ಲಾಜೆ

Update: 2018-06-24 15:10 GMT

ಲಿಂಗದಹಳ್ಳಿ, ಜೂ.24: ರೈತರು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಜೊತೆಗೆ ಸಾವಯವ ಕೃಷಿ ಮೂಲಕ ಉತ್ತಮ ಫಸಲು ಪಡೆಯಲು ಮುಂದೆ ಬರಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. 

ಲಿಂಗದಹಳ್ಳಿಯ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನದಲ್ಲಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಲ್ಲಿ ರಸಾಯನಿಕ ಗೊಬ್ಬರ ಹಾಗೂ ಔಷಧಗಳನ್ನು ಬಳಸುವ ಮೂಲಕ ಮಣ್ಣಿನ ಫಲವತ್ತತೆ ಹಾಳಾಗುವುದರ ಜೊತೆಗೆ ಅದರಲ್ಲಿ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಆರೋಗ್ಯದಲ್ಲೂ ಸಹ ಏರು ಪೇರು ಉಂಟಾಗಿ ತೊಂದರೆ ಅನುಭವಿಸುವಂತಾಗಿದೆ. 

ಮಣ್ಣಿನ ಪರೀಕ್ಷೆ ಮಾಡಿಸುವ ಮೂಲಕ ಮಣ್ಣಿನಲ್ಲಿ ಯಾವ ಅಂಶ ಕಡಿಮೆ ಇದೆ ಎಂಬುದನ್ನು ತಿಳಿದು ಆ ಅಂಶವನ್ನು ಬಳಸುವ ಮೂಲಕ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದರಲ್ಲದೇ ರೈತರು ಸಾವಯವ ವ್ಯವಸಾಯವನ್ನು ಹೆಚ್ಚಿಗೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ಆಧುನಿಕ ಕೃಷಿ ಪದ್ದತಿಯಿಂದ ರೈತರು ಬೆಳೆ ಬೆಳೆಯಲು ಮುಂದಾಗಬೇಕು. ಸರಕಾರ ಕೃಷಿ ಇಲಾಖೆಯ ಮೂಲಕ ಕೃಷಿ ಕ್ಷೇತ್ರಕ್ಕೆ ಹೆಚ್ಚು ಹಣ ಮೀಡಲಿಡುತ್ತಿದೆ. ಇಲಾಖೆ ಸರಕಾರದ ಸೌಲಭ್ಯಗಳನ್ನು ರೈತರಿಗೆ ಸಮರ್ಪಕವಾಗಿ ಒದಗಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು. 

ಹಿಂದೆ ಬಿಜೆಪಿ ಸರಕಾರವಿದ್ದಾಗ ರೈತರಿಗೆ ಅನೇಕ ಜನಪ್ರಿಯ ಯೋಜನೆಗಳನ್ನು ಬಿ.ಎಸ್.ಯಡಿಯೂರಪ್ಪನವರು ಜಾರಿಗೆ ತರುವ ಮೂಲಕ ರೈತರ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದರು. ಇತ್ತೀಚೆಗೆ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ರೈತರ ಒಂದು ಲಕ್ಷದ ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಈಗಿನ ಸರಕಾರ ಚುನಾವಣಾ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿ, ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ದೂರಿದ ಅವರು, ರೈತರು ಕೃಷಿ ಹಾಗೂ ವಿವಿಧ ಇಲಾಖೆಗಳ  ವತಿಯಿಂದ  ದೊರೆಯುವ ಮಾಹಿತಿ ಹಾಗೂ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಅಭಿವೃದ್ದಿ ಹೊಂದುವಂತೆ ಕರೆ ನೀಡಿದರು. 

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚಿತ್ರಸೇನ್ ರವರು ಪ್ರಸ್ತಾವಿಕ ಭಾಷಣದ ಮೂಲಕ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಮೀಪದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸುವಂತೆ ತಿಳಿಸಿದರು. 

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಂಸದೆ ಶೋಭ ಕರಂದ್ಲಾಜೆಯವರು ಸಮಗ್ರ ಕೃಷಿ ಅಭಿಯಾನದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಮಾಹಿತಿ ಕೈ ಪಡಿಯನ್ನು ಬಿಡುಗಡೆ ಮಾಡಿದರು. ಬಾವಿಕೆರೆ ಬೇಸಾಯ ಶಾಸ್ತ್ರ ಸಂಶೋಧನಾ ಕೇಂದ್ರ ವಿಜ್ಞಾನಿ ಸುನೀಲ್ ಹಾಗೂ ತರೀಕೆರೆಯ ಸುಜಲಾ ಯೋಜನೆಯ ಮಣ್ಣು ವಿಜ್ಞಾನಿ ಶ್ರೀ ರಾಘವೇಂದ್ರ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು. ಸಮಾರಂಭವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಎಲ್.ಎನ್. ಲಿಂಗರಾಜ್ ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷ ಕೆ.ಆರ್. ಆನಂದಪ್ಪ, ತರೀಕೆರೆ ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್, ತಾ.ಪಂ. ಸದಸ್ಯೆ ಹೇಮಾವತಿ ಪುಟ್ಟನಾಯ್ಕ, ತಿಗಡ ಗ್ರಾ.ಪಂ ಅಧ್ಯಕ್ಷೆ ಅಮುದ, ಕೃಷಿ ಜಂಟಿ ನಿರ್ದೇಶಕಿ ಎಂ.ಸಿ. ಸೀತಾ, ಉಪ ಕೃಷಿ ನಿರ್ದೇಶಕ ಸಿ.ಆರ್. ಚಂದ್ರಶೇಖರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಎಲ್. ಗಂಗಾಧರಮೂರ್ತಿ, ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಹರೀಶ್ ಕುಮಾರ್, ಸಹಾಯಕ ಕೃಷಿ ಅಧಿಕಾರಿ ಸೋಮಶೇಖರ್, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News