ಮೈಸೂರು ಜಿ.ಪಂ. ನಲ್ಲೂ ಕೈ-ದಳ ದೋಸ್ತಿ: ಏಳೂವರೆ ವರ್ಷಗಳ ಜಾ.ದಳ-ಬಿಜೆಪಿ ಮೈತ್ರಿ ಅಂತ್ಯ ?

Update: 2018-06-24 17:27 GMT

ಮೈಸೂರು,ಜೂ.24: ರಾಜ್ಯ ರಾಜಕೀಯದಲ್ಲಿನ ಬದಲಾವಣೆ ಜಿಲ್ಲೆಯ ಮೇಲೂ ಪರಿಣಾಮ ಬೀರಿದ್ದು, ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ಏಳೂವರೆ ವರ್ಷಗಳಿಂದ ಜಾರಿಯಲ್ಲಿದ್ದ ಜಾ.ದಳ-ಬಿಜೆಪಿ ಮೈತ್ರಿ ಮುರಿದು ಬೀಳುವ ಸಾಧ್ಯತೆಗಳಿವೆ.

ಮೈಸೂರಿನ ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಶನಿವಾರ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿದೆ. ಆದರೆ ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೊಂಡ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುವ ಬಗ್ಗೆ ಸಂಸದ ಧ್ರುವನಾರಾಯಣ್ ನೇತೃತ್ವದಲ್ಲಿ ನಗರದ ಜನದರ್ಶಿನಿಯಲ್ಲಿ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರು ಸಭೆ ಸೇರಿದ್ದರು ಎನ್ನಲಾಗಿದೆ. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಗೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ಜೊತೆಗೆ ಮುಂಬರುವ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಚುನಾವಣೆಯ ರಣತಂತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ಸಭೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ನೇಮಕದ ಬಗ್ಗೆ ಪಕ್ಷದ ವರಿಷ್ಠರ ಜೊತೆ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಸದ ಧ್ರುವನಾರಾಯಣ್ ಇದೇ ಸಂದರ್ಭದಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News