ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

Update: 2018-06-25 12:57 GMT

ಶಿವಮೊಗ್ಗ, ಜೂ. 25: ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ಸೂಳೇಬೈಲು ಬಡಾವಣೆಯಲ್ಲಿ ಭಾನುವಾರ ನಡೆದಿದೆ. 

ಅದೇ ಬಡಾವಣೆಯ ನಿವಾಸಿ ಹಬೀಬ್ (27) ಕೊಲೆಗೀಡಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮನಬಂದಂತೆ ದಾಳಿ ನಡೆಸಿದ ಪರಿಣಾಮ, ಹಬೀಬ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲಿಸಿದರು. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಶಿವಮೊಗ್ಗ ನಗರದ ದೊಡ್ಡಪೇಟೆ, ಹಾವೇರಿ ಜಿಲ್ಲೆಯ ಶಿಗ್ಗಾವಿ ಸೇರಿದಂತೆ ಹಲವು ಠಾಣೆಗಳಲ್ಲಿ ಹಬೀಬ್ ವಿರುದ್ದ ಕೊಲೆ, ಕಳ್ಳತನ ಸೇರಿದಂತೆ ಹಲವು ದೂರುಗಳು ದಾಖಲಾಗಿದ್ದವು. ಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹಂತಕರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News