ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡಲು ನಾನು ನಿರ್ಧರಿಸಿಲ್ಲ: ಸಚಿವ ಝಮೀರ್ ಅಹ್ಮದ್

Update: 2018-06-25 16:44 GMT

ಬೆಂಗಳೂರು, ಜೂ.25: ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇಂದು ಸಮುದಾಯದ ಚುನಾಯಿತ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.

ಸೋಮವಾರ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಶಾಸಕರು, ಸಂಸದರೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಬಾರಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಜೆಟ್ ನಲ್ಲಿ 3150 ಕೋಟಿ ರೂ.ಗಳ ಅನುದಾನ ಒದಗಿಸಲಾಗಿತ್ತು. ಈ ಬಾರಿ ಇನ್ನೂ ಹೆಚ್ಚಿನ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಉರ್ದು ಶಾಲೆಗಳ ಅಭಿವೃದ್ಧಿ, ಉರ್ದು ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕ, ಪಡಿತರ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸುವುದು ಸೇರಿದಂತೆ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡಲು ನಾನು ನಿರ್ಧರಿಸಿಲ್ಲ. ಆದರೂ ಅನಗತ್ಯವಾಗಿ ಇದನ್ನು ವಿವಾದ ಮಾಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ನಾನು ಹಜ್ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸುವಾಗ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವಂತೆ ಧಾರ್ಮಿಕ ಗುರುಗಳು ಸೇರಿದಂತೆ ಸಮಾಜದ ವಿವಿಧ ವಲಯಗಳಿಂದ ಬೇಡಿಕೆ ಬಂದಿರುವುದು ನನ್ನ ಗಮನಕ್ಕೆ ತಂದರು. ಆಗ ನಾನು ಈ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದಾಗಿ ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರನ್ನು ಇಡುವಂತೆ ಬಿಜೆಪಿ ನಾಯಕರು ನೀಡಿರುವ ಸಲಹೆಯನ್ನು ಸ್ವೀಕರಿಸಿದ್ದೇನೆ. ಹಜ್ ಭವನ ನಿರ್ಮಾಣಕ್ಕೆ ಮೊದಲು ಅನುದಾನ ಒದಗಿಸಿದ್ದು ಯಡಿಯೂರಪ್ಪ, ಕಾಮಗಾರಿಗೆ ಚಾಲನೆ ನೀಡಿದ್ದು ಸದಾನಂದ ಗೌಡ. ಈ‌ ಭವನ ನಿರ್ಮಾಣಕ್ಕೆ ಬಿಜೆಪಿಯವರ ಕೊಡುಗೆಯೂ ಇದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಮಾಜಿ ಕೇಂದ್ರ ಸಚಿವ ರಹ್ಮಾನ್ ಖಾನ್, ಶಾಸಕರಾದ ಎನ್.ಎ.ಹಾರೀಸ್, ರಹೀಂ ಖಾನ್, ಕನೀಝ್ ಫಾತಿಮಾ, ರಾಜ್ಯ ಸಭಾ ಸದಸ್ಯ ನಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಬಿ.ಎಂ.ಫಾರೂಕ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹಮದ್, ಅಲ್ಪಸಂಖ್ಯಾತರ ಇಲಾಖೆ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಅಕ್ರಮ್ ಪಾಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News