ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ಪ್ರಾಶಸ್ತ್ಯ ನೀಡಲು ಒತ್ತಾಯ: ಸಿಎಂರನ್ನು ಭೇಟಿಯಾದ ಜನಪ್ರತಿನಿಧಿಗಳ ನಿಯೋಗ

Update: 2018-06-26 13:18 GMT

ಬೆಂಗಳೂರು, ಜೂ.26: ಮುಂದಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ, ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮಂಗಳವಾರ ನಗರದ ಶಕ್ತಿ ಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಝಮೀರ್‌ ಅಹ್ಮದ್‌ ಖಾನ್ ನೇತೃತ್ವದ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್‌ ಅಹ್ಮದ್, ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಆದ್ಯತೆ ನೀಡಲು ಉದ್ದೇಶಿಸಿದ್ದಾರೆ. ಆದುದರಿಂದ, ಉಳಿದ ಇಲಾಖೆಗಳಿಗೆ ಹಣಕಾಸಿನ ಕೊರತೆಯುಂಟಾಗುವುದು ಸಹಜ. ನಮ್ಮ ಇಲಾಖೆಗೂ ಹೆಚ್ಚಿನ ಅನುದಾನ ನಿರೀಕ್ಷೆ ಮಾಡುವುದು ಕಷ್ಟ ಎಂದರು.

ಕಳೆದ ಬಜೆಟ್‌ನಲ್ಲಿ ಒದಗಿಸಿರುವ ಅನುದಾನದಲ್ಲಿ ಶೇ.10ರಷ್ಟು ಹೆಚ್ಚುವರಿ ಅನುದಾನ ಕಲ್ಪಿಸಿದರೂ ಸಾಕು. ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಸಲ್ಲಿಸಲು ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದೇವೆ. ಈ ಬಾರಿ ಕನಿಷ್ಠ 500 ಕೋಟಿ ರೂ.ಹೆಚ್ಚುವರಿ ಅನುದಾನದ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಮನವಿ: ಉರ್ದು ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ಉರ್ದು ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕ ಮಾಡುವುದು, ವಕ್ಫ್ ಆಸ್ತಿಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಅನುದಾನ ಒದಗಿಸುವುದು, ಶಾದಿ ಭಾಗ್ಯ ಯೋಜನೆಗೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸುವಂತೆ ನಿಯೋಗವು ಮುಖ್ಯಮಂತ್ರಿಗೆ ಮನವಿ ಮಾಡಿದೆ ಎಂದು ತಿಳಿದು ಬಂದಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನವೇ ಅಂತಿಮ. ಬಜೆಟ್ ಮಂಡನೆ ಬೇಡ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ವೈಯಕ್ತಿಕವಾದದ್ದು. ಜು.5ರಂದು ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ವಿಚಾರದಲ್ಲಿ ಯಾವುದೆ ಗೊಂದಲಗಳಿಲ್ಲ ಎಂದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸಂಪುಟ ರಚನೆ ವೇಳೆ ತನಗೆ ಬೆಂಗಳೂರು ನಗರ ಅಭಿವೃದ್ಧಿ ಖಾತೆ ಕೈ ತಪ್ಪಿರುವ ವಿಚಾರದಲ್ಲಿ ನನಗೆ ಯಾವುದೆ ಬೇಸರ, ಅಸಮಾಧಾನವಿಲ್ಲ ಎಂದು ಜಾರ್ಜ್ ಹೇಳಿದರು.

ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗದಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಮಾಜಿ ಕೇಂದ್ರ ಸಚಿವ ಡಾ.ಕೆ.ರಹ್ಮಾನ್‌ ಖಾನ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹ್ಮದ್, ಶಾಸಕ ರಹೀಂ ಖಾನ್, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಬಿ.ಎಂ.ಫಾರೂಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಿಗದಿಯಂತೆ ಬಜೆಟ್ ಮಂಡನೆ
ನಿಗದಿಯಂತೆ ಸಮ್ಮಿಶ್ರ ಸರಕಾರದ ಮೊದಲನೆ ಬಜೆಟ್ ಮಂಡನೆಯಾಗಲಿದೆ. ನಮಲ್ಲಿ ಯಾವುದೆ ರೀತಿಯ ಗೊಂದಲಗಳಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News