ಉತ್ತರ ಕರ್ನಾಟಕವನ್ನು ಕಡೆಗಣಿಸುತ್ತಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜೂ.27: ನೂತನ ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ನಗರದಿಂದ ರಾಜ್ಯದ ಆರ್ಥಿಕತೆಗೆ ಶೇ.60 ರಿಂದ 65 ರಷ್ಟು ಆದಾಯ ಬರುತ್ತಿದೆ. ಅದನ್ನು ರಾಜ್ಯದ ಸಮಗ್ರ ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತದೆ. ಆದರೆ, ನಮ್ಮ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಪೂರೈಸುತ್ತಿದೆ. ಅಷ್ಟರಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದಾರೆ ಎಂದು ದೂರಿದರು.
ಸರಕಾರದ ಜಲಸಂಪನ್ಮೂಲ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೃಷಿ ಸೇರಿದಂತೆ ಎಲ್ಲ ಸಚಿವರು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಜನರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಉತ್ತರ ಕರ್ನಾಟಕದ ಅನೇಕ ಭಾಗಗಳಿಗೆ ಸಚಿವರು ಭೇಟಿ ನೀಡಿದ್ದಾರೆ. ನಮ್ಮ ಸರಕಾರ ಕೇವಲ ಒಂದು ಭಾಗಕ್ಕೆ ಸೀಮಿತವಾಗಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದರು.
ಸಮ್ಮಿಶ್ರ ಸರಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗಾಗಿ ಬದ್ಧವಾಗಿದೆ. ರೈತರ ಸಾಲ ಮನ್ನಾದಿಂದ ಬಹುತೇಕ ರೈತರಿಗೆ ಅನುಕೂಲವಾಗುವುದಿಲ್ಲ ಎಂದು ವಿಶ್ಲೇಷಿಸಿದ್ದಾರೆ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಸಾಲ ಮನ್ನಾ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಕೊಡಗಿನಲ್ಲಿ ಹೆಚ್ಚಿನ ಮಳೆ ಸುರಿದು ಕೆಆರ್‌ಎಸ್ ಜಲಾಶಯ ಪೂರ್ತಿಯಾದರೆ ನನಗೆ ಅರ್ಧ ತಲೆನೋವು ಕಡಿಮೆಯಾಗುತ್ತದೆ ಎಂದು ನುಡಿದರು.