ಹುಲಿಗಿ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿ: ಡಾ.ಜಿ.ಪರಮೇಶ್ವರ್
ಕೊಪ್ಪಳ, ಜೂ.27: ಕೊಪ್ಪಳ ತಾಲೂಕಿನ ಹುಲಿಗಿ-ಹೊಸಳ್ಳಿಯಲ್ಲಿ ಸ್ಥಾಪಿಸಲಾಗಿರುವ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕವು ಇಡೀ ರಾಜ್ಯಕ್ಕೆ ಮಾದರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬುಧವಾರ ಹುಲಿಗಿ- ಹೊಸಳ್ಳಿಯಲ್ಲಿ ಸ್ಥಾಪಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹಲವು ಗ್ರಾಮ ಪಂಚಾಯತ್ ಗಳ ಸಹಭಾಗಿತ್ವದಲ್ಲಿ ನಿರ್ಮಿಸಲಾಗಿರುವ ಈ ಘನ ತ್ಯಾಜ್ಯ ವಿಲೇವಾರಿ ಘಟಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಬಹುತೇಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳು ಈ ಘಟಕಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.
ಈ ಘಟಕದ ಬಗ್ಗೆ ಹಲವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಹೀಗಾಗಿ ಇಲ್ಲಿಗೆ ಭೇಟಿ ನೀಡಬೇಕೆಂಬ ಕುತೂಹಲವಿತ್ತು. ಇಂದು ಇಲ್ಲಿನ ಕಾರ್ಯ ನಿರ್ವಹಣೆಯನ್ನು ಸ್ವತಃ ನಾನೇ ನೋಡಿದ್ದೇನೆ. ಇಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವನ್ನು ಬೇರ್ಪಡಿಸುವ ವ್ಯವಸ್ಥೆ, ಎರೆಹುಳು ಗೊಬ್ಬರ ತಯಾರಿಕೆ ಘಟಕವು ರಾಜ್ಯಕ್ಕೆ ಮಾದರಿಯಾಗಿದೆ. ಈ ಘಟಕ ಸ್ಥಾಪಿಸಲು ಶ್ರಮಿಸಿದ ಎಲ್ಲ ಅಧಿಕಾರಿ ಮತ್ತು ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು.
ಬೆಂಗಳೂರು ನಗರದಲ್ಲಿಯೂ ಕಸವಿಲೇವಾರಿಯದ್ದೇ ಪ್ರಮುಖ ಸಮಸ್ಯೆಯಾಗಿದೆ. ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಗೆ ಸುಮಾರು 110 ಗ್ರಾಮಗಳ ಸೇರ್ಪಡೆಯಾಗಿದ್ದು, ಇಲ್ಲಿನ ಮಾದರಿಯಲ್ಲಿಯೇ ಹಲವು ಗ್ರಾಮಗಳ ಜೊತೆಗೂಡಿ, 8 ರಿಂದ 10 ಗ್ರಾಮಗಳಿಗೊಂದರಂತೆ, ಇದೇ ಮಾದರಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಪರಮೇಶ್ವರ್ ಹೇಳಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಟಿ.ಜನಾರ್ದನ ಹುಲಿಗಿ, ಘನತ್ಯಾಜ್ಯ ವಿಲೇವಾರಿ ಘಟಕದ ಎಲ್ಲ ವಿಭಾಗಗಳ ಕುರಿತು ಪರಮೇಶ್ವರ್‌ಗೆ ಪರಿಚಯಿಸಿ, ಇಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.