×
Ad

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವ ವಿಚಾರ: ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

Update: 2018-06-27 21:43 IST

ಬೆಂಗಳೂರು, ಜೂ.27: ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವುದರಿಂದ ಇದೇ ವಿಷಯದ ಅರ್ಜಿಯನ್ನು ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅಪಘಾತಗಳಲ್ಲಿ ಸಾವನ್ನಪ್ಪುವ ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡಲು ರಾಜ್ಯ ಸರಕಾರಕ್ಕೆ ಸೂಚಿಸಲು ಕೋರಿದ್ದ ಅರ್ಜಿಯನ್ನು ಇತ್ಯರ್ಥ ಪಡಿಸಿದೆ.

ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಒಕ್ಕೂಟಗಳ ಮಂಡಳಿ(ಎಐಸಿಸಿಟಿಯು) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣಾ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿದೆ.

ಕಟ್ಟಡ ಕಾರ್ಮಿಕರಿಗೆ ಪರಿಹಾರ ಕಲ್ಪಿಸುವ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಅದೇ ಬೇಡಿಕೆಗಳಿಗೆ ಸಂಬಂಧಿಸಿದ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ಅವಕಾಶವಿಲ್ಲ. ಹೀಗಾಗಿ, ಅರ್ಜಿದಾರರು ತಮ್ಮ ಮನವಿಯನ್ನು ಸರಕಾರಕ್ಕೆ ಸಲ್ಲಿಸಬಹುದು. ಅವುಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಸರಕಾರ ಶೀಘ್ರದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಬಹುದು ಎಂದು ಸೂಚಿಸಿದೆ.

ಅರ್ಜಿಯಲ್ಲಿ ಕೋರಿದ್ದ ಅಂಶಗಳು: ಇತ್ತೀಚಿನ ದಿನಗಳಲ್ಲಿ ಕಾಯಿಲೆಯಿಂದ ಹಾಗೂ ದುರ್ಘಟನೆಗಳಲ್ಲಿ ಸಾವನ್ನಪ್ಪುತ್ತಿರುವ ಕಟ್ಟಡ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಹಾಗೂ ಗಾಯಾಳುಗಳ ಕುಟುಂಬಗಳಿಗೆ 10 ಲಕ್ಷ ಪರಿಹಾರ ನಿಗದಿಪಡಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಕಟ್ಟಡ ಕಾರ್ಮಿಕರ ಸ್ಥಿತಿ ಹೀನಾಯವಾಗಿದೆ. ಹೀಗಾಗಿ ಅವರ ಸ್ಥಿತಿಗತಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News